18ರಂದು ಮಳವಳ್ಳಿಗೆ ಮುಖ್ಯಮಂತ್ರಿಯವರ ಆಗಮನ

| Published : Feb 11 2024, 01:46 AM IST

ಸಾರಾಂಶ

ಮಳವಳ್ಳಿಯಲ್ಲಿ ಫೆ.18 ರಂದು ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವ ಹಿನ್ನೆಲೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಪಟ್ಟಣದಲ್ಲಿ ಫೆ.18 ರಂದು ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವ ಹಿನ್ನೆಲೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗ ನಡೆಯುವ ಸಮಾವೇಶದ ಹಿನ್ನೆಲೆ ಸರ್ಕಾರದ ಅಧಿಕೃತ ಕಾರ್ಯಕ್ರಮಕ್ಕೆ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದರಿಂದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕರು ಕೋರಿದರು.

ನಂತರ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಫಲಾನುಭವಿಗಳನ್ನು ಕರೆ ತರುವುದು ಮತ್ತು ವಾಪಸ್ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಊಟ, ನೀರು ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿಗಳು ಬರುತ್ತಿರುವ ಜೊತೆಗೆ ಸಿಡಿಹಬ್ಬಕ್ಕೆ ಸಿದ್ದತೆಗಳು ನಡೆಯುತ್ತಿವೆ. ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು. ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು. ಕೆರೆ ಸಮೀಪ ಇರುವ ಮಣ್ಣಿನ ಗುಡ್ದೆಗಳನ್ನು, ಬೇಲಿಯನ್ನು ತೆರವು ಮಾಡಬೇಕು. ಪುರಸಭೆ ವತಿಯಿಂದ ಸ್ವಚ್ಛತೆಗಾಗಿ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಯಶಸ್ವಿಗೆ ಐದು ಕಮೀಟಿಗಳನ್ನು ಮಾಡಲಾಗಿದೆ. ಕಮೀಟಿಯಲ್ಲಿನ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು. ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಲ್ಲುಗಳನ್ನು ಸರಿಯಾಗಿ ಜೋಡಿಸಿ ರಿಮೋಟ್ ಕಂಟ್ರೋಲ್ ಮೂಲಕ ಉದ್ಘಾಟಿಸುವ ರೀತಿ ನಿರ್ವಹಿಸಬೇಕು. ಶಂಕುಸ್ಥಾಪನೆಯಾಗುವ ಪ್ರತಿಯೊಂದು ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಕಿರು ಮಾಹಿತಿ ನೀಡುವಂತಾಗಬೇಕು ಎಂದು ತಿಳಿಸಿದರು.

ಅಹ್ವಾನ ಪತ್ರಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೇ ಶಿಷ್ಟಚಾರದಂತೆ ಮೇಲ್ಮಟ್ಟದ ಅಧಿಕಾರಿಗಳಿಗೆ ನೀಡಬೇಕು. ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆಯನ್ನು ಸಮರ್ಪಕವಾಗಿ ನೀಡಬೇಕು. ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಪುರಸಭೆಯು ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ನಿರ್ದೇಶಕ ಸಿದ್ದಲಿಂಗೇಶ್ ಬೇವಿನಮಠ, ತಹಸೀಲ್ದಾರ ಕೆ.ಎನ್ . ಲೋಕೇಶ್, ತಾಪಂ ಇಒ. ಎಲ್. ಮಮತ ಸೇರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.