ಡೆಂಘೀ ಹಾವಳಿ ತಡೆಗೆ ಸಿಎಂ ತಾಕೀತು

| Published : Jun 26 2024, 12:36 AM IST

ಸಾರಾಂಶ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡೆಂಘೀ ಜ್ವರ ನಿಯಂತ್ರಣ ಸಂಬಂಧ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡೆಂಘೀ ಪ್ರಕರಣ ಹೆಚ್ಚಾಗದಂತೆ ಹಾಗೂ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದ್ದಾರೆ.

ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಸೋಮವಾರದವರೆಗೆ ರಾಜ್ಯದಲ್ಲಿ ಒಟ್ಟು 5,374 ಪ್ರಕರಣ ಕಾಣಿಸಿಕೊಂಡಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಪ್ರಕಾರ, ಡೆಂಘೀ ಮರಣ ಪ್ರಮಾಣ ಶೇ.0.5 ರಷ್ಟು ಮೀರುವಂತಿಲ್ಲ. ರಾಜ್ಯದಲ್ಲಿ ಮರಣ ಪ್ರಮಾಣ ಶೇ.0.09 ರಷ್ಟಿದೆ. ಮರಣ ಪ್ರಮಾಣ ಕಡಿಮೆ ಇದೆ ಎಂದು ನಿರ್ಲಕ್ಷ್ಯ ಮಾಡುವುದು ಬೇಡ, ಈಗಲೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು.

ಡೆಂಘೀ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ಚುಮದ್ದು, ಪ್ಲೇಟ್‌ಲೆಟ್ಸ್‌ಗಳನ್ನು ಸಂಗ್ರಹಿಸಿ. ಬೆಂಗಳೂರಿನಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ನಿರ್ದೇಶಿಸಿದರು. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್ಎಸ್ಎಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಿ. ಪ್ರತಿ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ಮಾಡುವಂತಹ ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘೀ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಸ್ವಚ್ಚತೆಗೆ ಆದ್ಯತೆ ಕೊಡಿ:

ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘೀ ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸೂಚನೆ ನೀಡಿದರು. ಈ ವಿಷಯದಲ್ಲಿ ಸರ್ಕಾರದ ಜತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಿದಲ್ಲಿ ರೋಗವನ್ನು ನಿರ್ಮೂಲನೆ ಮಾಡಬಹುದು ಎಂದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ್‌ ಗುಪ್ತಾ, ಆಯುಕ್ತ ಡಿ.ರಂದೀಪ್‌ ಉಪಸ್ಥಿತರಿದ್ದರು.