ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಸಿಎಂ: ಜಗದೀಶ ಶೆಟ್ಟರ್‌

| Published : Jan 04 2025, 12:32 AM IST

ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಸಿಎಂ: ಜಗದೀಶ ಶೆಟ್ಟರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಸಂಪುಟದ ಸಚಿವರು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮನಸ್ಥಿತಿಯನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ.

ಹುಬ್ಬಳ್ಳಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ಆರೋಪಿಸಿದರು.

ಅವರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಉಚಿತವಾಗಿ ನೀಡುವುದಾಗಿ ಹೇಳುವ ಸರ್ಕಾರ ಮತ್ತೊಂದೆಡೆ ಸಾಲ ಮಾಡುತ್ತಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆ ಸಾಲ ಹಾಗೂ ಬಡ್ಡಿಯಲ್ಲಿ ನಡೆಯುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಇದಕ್ಕೆ ಕಾರಣ. ಬಸ್ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಹೊರೆ ಮಾಡಲಾಗುತ್ತಿದೆ. ಬಸ್ ಪ್ರಯಾಣ ದರ ಏರಿಕೆಗೆ ನನ್ನ ವಿರೋಧವಿದೆ ಎಂದರು.

ಮಂತ್ರಿಗಳಿಂದಲೇ ಭ್ರಷ್ಟಾಚಾರ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಸಂಪುಟದ ಸಚಿವರು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮನಸ್ಥಿತಿಯನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ತಲೆ ದಂಡವಾಗುತ್ತಿದೆ ಎಂದರು.

ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆಯ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಬಂದಿದ್ದು, ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಈ ಪ್ರಕರಣದ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಪ್ರತ್ಯೇಕ ಪಾಲಿಕೆ ಸ್ವಾಗತಾರ್ಹ:

ರಾಜ್ಯ ಸರ್ಕಾರವು ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಇದರ ಬಗ್ಗೆ ಈ ಮೊದಲು ನಾನು ಧ್ವನಿ ಎತ್ತಿದ್ದೆ. ಧಾರವಾಡ ಜನತೆಯ ಬಹು ದಿನಗಳ ಬೇಡಿಕೆ ಇದುವೇ ಆಗಿತ್ತು. ಹುಬ್ಬಳ್ಳಿ ಹಾಗೂ ಧಾರವಾಡ ವಿಭಜನೆಯಾಗುವುದರಿಂದ ಎರಡೂ ನಗರಗಳು ಅಭಿವೃದ್ಧಿಯಾಗುವ ಭರವಸೆಯಿದೆ ಎಂದರು.