ಗೇಟ್‌ಗಳಿಗೆ ಚೈನ್ ಅಳವಡಿಕೆ ಕಾರ್ಯ ಮುಕ್ತಾಯ ಹಂತದಲ್ಲಿದೆ
ಮುನಿರಾಬಾದ್: ಜೂನ್ 25ರಂದು ತುಂಗಭದ್ರಾ ಜಲಾಶಯದ ನೂತನ ಗೇಟ್‌ಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ ಭಾಗವಹಿಸಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಅವರು ಗುರುವಾರ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಈಗಾಗಲೇ ತುಂಗಭದ್ರಾ ಜಲಾಶಯದ ಎಲ್ಲ 33 ಗೇಟ್ ಬದಲಿಸುವ ಕಾರ್ಯ ಪೂರ್ಣಗೊಂಡಿದ್ದು, ಗೇಟ್‌ಗಳಿಗೆ ಚೈನ್ ಅಳವಡಿಕೆ ಕಾರ್ಯ ಮುಕ್ತಾಯ ಹಂತದಲ್ಲಿದೆ. ನೂತನ ಗೇಟ್‌ಗಳ ಅಳವಡಿಕೆ ಕಾರ್ಯಕ್ಕೆ 51 ಕೋಟಿ ವೆಚ್ಚವಾಗಿದೆ. ಇದನ್ನು ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳು ಭರಿಸಿದೆ ಎಂದರು.
ತುಂಗಭದ್ರಾ ಜಲಾಶಯ ಅಂತರ್ ರಾಜ್ಯ ಜಲಾಶಯವಾಗಿದ್ದು, ಈ ಜಲಾಶಯದ ನೀರನ್ನು ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳು ಹಂಚಿಕೊಳ್ಳುತ್ತವೆ. ಈ ಹಿನ್ನೆಲೆ ತುಂಗಭದ್ರಾ ಜಲಾಶಯದ ನೂತನ ಗೇಟುಗಳ ಉದ್ಘಾಟನಾ ಸಮಾರಂಭಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಜಲ ಶಕ್ತಿ ಸಚಿವರು ಜೂ.25 ರಂದು ಆಗಮಿಸಲಿದ್ದಾರೆ ಎಂದರು.ಇಲ್ಲಿನ ಭಾರತೀಯ ರಿಸರ್ವ್ ಬಟಾಲಿಯನ್‌ನಲ್ಲಿ 4 ಪ್ರತ್ಯೇಕ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಜೂ.25ರಂದು ತುಂಗಭದ್ರಾ ಜಲಾಶಯದ ಮೇಲೆ ಮೂರು ರಾಜ್ಯದ ಮುಖ್ಯಮಂತ್ರಿ ಹಾಗೂ ಕೇಂದ್ರದ ಜಲ ಶಕ್ತಿ ಸಚಿವರು ಜಂಟಿಯಾಗಿ ತುಂಗಭದ್ರಾ ಮಾತೆಗೆ ಪೂಜೆ ಸಲ್ಲಿಸಿ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ, ನಂತರ ಎಲ್ಲ ಗಣ್ಯರು ಮುನಿರಾಬಾದಿನ ಸರ್ಕಾರಿ ಶಾಲೆಯ ಮೈದಾನದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.ನವಲಿ ಸಮಾಂತರ ಜಲಾಶಯ ನಿರ್ಮಾಣ ವಿಳಂಬವಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಇದಕ್ಕೆ ಸಮ್ಮತಿಸಿದರೆ ಮಾತ್ರ ಇದು ಸಾಧ್ಯವಾಗುತ್ತದೆ. ಜೂ.25ರಂದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳು ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದರು.
ಮುಖ್ಯಮಂತ್ರಿ ಹಾಗೂ ತಾವು ಮೇಕೆದಾಟು ಹಾಗೂ ಮಹದಾಯಿ ಯೋಜನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿದ್ದೇವೆ. ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಹಿಟ್ನಾಳ್, ಬಳ್ಳಾರಿ ವಲಯ ಐಜಿಪಿ ಡಾ.ಹರ್ಷ, ಕೊಪ್ಪಳ ಎಸ್ಪಿ ರಾಮ್ ಎಲ್ ಅರಸಿದ್ದಿ, ಕರ್ನಾಟಕ ನೀರಾವರಿ ನಿಗಮದ ವ್ಯಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ನೀರಾವರಿ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಮುಖ್ಯ ಅಭಿಯಂತರ ಶ್ರೀನಿವಾಸ ಮಲ್ಲಿಗಿವಾಡ, ಕಾರ್ಯಪಾಲಕ ಅಭಿಯಂತರ ನಾಗನಾಥ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.