8 ರಂದು ಸಿಎನ್‌ಸಿಯಿಂದ ಹಕ್ಕೋತ್ತಾಯ ಮಂಡನೆ

| Published : Mar 07 2025, 12:51 AM IST

ಸಾರಾಂಶ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಮಾ. 8ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ನ್ಯಾಷನಲ್‌ ಕೌನ್ಸಿಲ್‌ ವತಿಯಿಂದ ಹಕ್ಕೋತ್ತಾಯ ಮಂಡಿಸಲಾಗುವುದು.

ಮಡಿಕೇರಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೋತ್ತಾಯಗಳನ್ನು ಮಂಡಿಸಲಾಗುವುದೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಪರವಾಗಿ ಹಕ್ಕೋತ್ತಾಯಗಳನ್ನು ಮಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಅಂತರಾಷ್ಟ್ರೀಯ ಕಾನೂನು ಮತ್ತು ಎಸ್‌ಟಿ ವರ್ಗೀಕರಣದ ಅಡಿಯಲ್ಲಿ ವಿಶ್ವರಾಷ್ಟ್ರ ಸಂಸ್ಥೆ ಆದಿಮಸಂಜಾತ ಸಮಾವೇಶದಲ್ಲಿ ಮಾನ್ಯತೆ ಕಲ್ಪಿಸಬೇಕು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.33 ಮೀಸಲಾತಿ ಆಂತರಿಕ ಕೋಟಾದಡಿ ನೀಡಬೇಕು. ಸ್ವಾಧೀನಪಡಿಸಿಕೊಂಡಿರುವ ಮತ್ತು ಅಡಮಾನ ಇಟ್ಟಿರುವ ಪೂರ್ವಜರ ಪರಂಪರೆಯ ಆಸ್ತಿಗಳನ್ನು ಮರುಸ್ಥಾಪಿಸಬೇಕು ಎಂಬ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಕಾರ್ಯವಿಧಾನಗಳ ಮೂಲಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.