ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ: ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಬೇಕು. ಅದಕ್ಕೆ ಸರ್ಕಾರವು ಸಹ ಇನ್ನಷ್ಟು ಅವಕಾಶ ಮಾಡಬೇಕು. ಇದರಿಂದ ಸಹಕಾರ ಸಂಘ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

73 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ‘ಉನ್ನತಿ ಭವನ’ದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಸಹಕಾರ ಸಂಘ ಸಂಸ್ಥೆಗಳು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಇದರಿಂದ ಗ್ರಾಮೀಣ ಪ್ರದೇಶದ ಕೃಷಿಕರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಸಾಧ್ಯ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಒಬ್ಬರು ಮತ್ತೊಬ್ಬರಿಗೆ ಸಹಾಯಹಸ್ತ ಚಾಚುವುದೇ ಆಗಿದೆ. ಆ ನಿಟ್ಟಿನಲ್ಲಿ ಸಹಕಾರ ತತ್ವದಡಿ ಸಹಕಾರ ಸಂಘಗಳನ್ನು ಬಲಯುತಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ರಾಬಿನ್ ದೇವಯ್ಯ ಮಾತನಾಡಿ ಸಹಕಾರ ಕ್ಷೇತ್ರವನ್ನು ಬಲಪಡಿಸುವಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಎಂ.ಎಂ.ಶ್ಯಾಮಲ ಅವರು ಸಹಕಾರ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ, ಲಿಂಗ ಅಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು ಕುರಿತು ಮಾತನಾಡಿದರು.

ಸಹಕಾರ ರತ್ನ ಪ್ರಶಸ್ತಿಯನ್ನು ಹಂಡ್ಲಿ ಗ್ರಾಮದ ಹಿರಿಯ ಸಹಕಾರಿ ಎಸ್.ಕೆ.ವೀರಪ್ಪ ಅವರಿಗೆ ನೀಡಿ ಸನ್ಮಾನಿಸಲಾಯಿತು. ಶ್ರೇಷ್ಠ ಸಹಕಾರಿಗಳಾದ ನಾಪೋಕ್ಲುವಿನ ಹಿರಿಯ ಸಹಕಾರಿ ಕೊಂಡ್ಯೋಳಂಡ ಪಿ.ಮುದ್ದಯ್ಯ, ಪೊನ್ನಂಪೇಟೆಯ ಮುದ್ದಿಯಡ ಎ.ಸೋಮಯ್ಯ, ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ಲೋಕೇಶ್ವರಿ ಗೋಪಾಲ್ ಅವರಿಗೆ ನೀಡಿ ಗೌರವಿಸಲಾಯಿತು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಕೆ.ಎಂ.ತಮ್ಮಯ್ಯ, ಎ.ಎಸ್.ಶ್ಯಾಮಚಂದ್ರ, ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿ ಉತ್ತಪ್ಪ, ಅಮೃತ್ ವಿ.ಸಿ., ಸುನಿಲ್ ರಾವ್, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ಎ.ಎಂ.ಮುತ್ತಪ್ಪ, ಪಿ.ಎಂ.ಚಂದ್ರಪ್ರಕಾಶ್, ಎಚ್.ಎಂ.ರಮೇಶ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್, ನಿರ್ದೇಶಕರಾದ ಹರೀಶ್ ಪೂವಯ್ಯ ಮತ್ತಿತರರು ಇದ್ದರು.