ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಮಾಹಿತಿ ಸಂಗ್ರಹಿಸಿ: ಡಿಸಿ ನಳಿನ್ ಅತುಲ್‌

| Published : Feb 05 2024, 01:48 AM IST

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಮಾಹಿತಿ ಸಂಗ್ರಹಿಸಿ: ಡಿಸಿ ನಳಿನ್ ಅತುಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಹೋಬಳಿವಾರು ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ.

ಕೊಪ್ಪಳ: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಹೋಬಳಿವಾರು ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುವ ಕುರಿತು ಚರ್ಚಿಸಲು ಶನಿವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಲ್ಲಿ ಈಗಾಗಲೇ ಜಿಲ್ಲೆಯ ಶೇ.90 ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಬಾಕಿ ಉಳಿದ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವುದು ಸರ್ಕಾರ, ಜಿಲ್ಲಾಡಳಿತ, ಅನುಷ್ಠಾನಾಧಿಕಾರಿಗಳ ಜವಾಬ್ದಾರಿಯಾಗಿದೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಹೋಬಳಿವಾರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಫಲಾನುಭವಿಗಳಿಗೆ ಮಾಹಿತಿ ಹಾಗೂ ಜಾಗೃತಿ ಕೊರತೆಯಿಂದ ಯೋಜನೆಗೆ ಅರ್ಜಿ ಸಲ್ಲಿಸದೇ ಇರಬಹುದು. ಅಂತಹವರನ್ನು ಗುರುತಿಸಿ ಅರ್ಹ ಫಲಾನುಭವಿಗೆ ಯೋಜನೆ ಲಾಭ ಒದಗಿಸಿ. ಇದೇ ತಿಂಗಳಲ್ಲಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಆಯೋಜಿಸುವ ಸಾಧ್ಯತೆ ಇದ್ದು, ಅಷ್ಟರೊಳಗೆ ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ದೊರಕುವಂತೆ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ಫಲಾನುಭವಿಗಳ ಸಂಖ್ಯೆ ತಾಳೆಯಾಗಬೇಕು. ಎಪಿಎಲ್, ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿ ಆಹಾರ ಇಲಾಖೆಯಲ್ಲಿ ಲಭ್ಯವಿದೆ. ಅದರನ್ವಯ ಉಳಿದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುತ್ತದೆ. ಯುವನಿಧಿ ಯೋಜನೆಯಲ್ಲಿ ಡಿಪ್ಲೊಮಾ ಹಾಗೂ ಪದವೀಧರರ ನೋಂದಣಿ ಆರಂಭವಾಗಿದ್ದು, ಜಿಲ್ಲೆಯ ಕಾಲೇಜುಗಳಿಂದ ಮಾತ್ರವಲ್ಲದೆ, ಬೇರೆ ಜಿಲ್ಲೆಯಲ್ಲಿ ಶಿಕ್ಷಣ ಪಡೆದ ಜಿಲ್ಲೆಯ ಫಲಾನುಭವಿಗಳ ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಂಪರ್ಕಿಸಿ ಪಡೆಯಿರಿ ಎಂದು ಹೇಳಿದರು.ಆದಾಯ ತೆರಿಗೆ, ಜಿಎಸ್‌ಟಿ ಪಾವತಿ ಮಾಡದ, ಎಪಿಎಲ್ ಪಡಿತರ ಚೀಟಿ ಹೊಂದಿದ ಎಲ್ಲ ಮಹಿಳೆಯರೂ ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದು, ಇಲಾಖಾವಾರು ಕಾರ್ಯನಿರ್ವಹಿಸುವ ಅರ್ಹ ಮಹಿಳಾ ಉದ್ಯೋಗಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ, ಯೋಜನೆಗೆ ನೋಂದಾಯಿಸಲು ಸಲಹೆ ನೀಡಿ. ಮುಂದಿನ 15 ದಿನಗಳಲ್ಲಿ ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರಕಿರಬೇಕು. ಈ ಬಗ್ಗೆ ಎಲ್ಲ ಇಲಾಖೆಗಳ ಅನುಷ್ಠಾನಾಧಿಕಾರಿಗಳು ವರದಿ ನೀಡಬೇಕು ಎಂದು ಸೂಚಿಸಿದರು.ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶಕ್ಕೆ ಮುಖ್ಯಮಂತ್ರಿ ಆಗಮಿಸುವ ಸಾಧ್ಯತೆ ಇದ್ದು, ಜಿಲ್ಲೆಯ ಎಲ್ಲ ಇಲಾಖೆಗಳ ಯಾವುದೇ ಪ್ರಮುಖ ಯೋಜನೆ, ಕಾಮಗಾರಿ, ಕಟ್ಟಡ ಉದ್ಘಾಟನೆ ಬಾಕಿ ಇದ್ದರೆ ಅವುಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿ. ಮುಖ್ಯಮಂತ್ರಿಯಿಂದ ಜಿಲ್ಲೆಯ ಪ್ರಮುಖ ಯೋಜನೆಗಳು, ಕಾಮಗಾರಿಗಳನ್ನು ಉದ್ಘಾಟಿಸಲು ಕ್ರಮ ವಹಿಸಲಾಗುವುದು. ಎಲ್ಲ ಇಲಾಖೆಗಳಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆ, ಕಾಮಗಾರಿ ಬಗ್ಗೆ ಮುಂದಿನ ವಾರದೊಳಗೆ ಮಾಹಿತಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಡಿಪಿಐ ಶ್ರೀಶೈಲ ಬಿರಾದಾರ, ಕಿಮ್ಸ್ ನಿರ್ದೇಶಕ ವಿಜಯಕುಮಾರ ಇಟಗಿ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.