ಸಾರಾಂಶ
ನೂರಕ್ಕೆ ನೂರು ಮತದಾನ ಉಡುಪಿ ಜಲ್ಲೆಯ ವಾಗ್ದಾನ ಎಂಬ ಘೋಷ ವಾಕ್ಯವನ್ನು ಕೂಗುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಲೋಕಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಶನಿವಾರ ನಗರದ ಅಜ್ಜರಕಾಡಿನ ಭುಜಂಗ ಪಾರ್ಕ್ನಲ್ಲಿ ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ನಗರಸಭಾ ಪರಿಸರ ಅಭಿಯಂತರಾದ ಸ್ನೇಹ ಕೆ. ಎಸ್. ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.ಇದೇ ಸಂದರ್ಭದಲ್ಲಿ ನೂರಕ್ಕೆ ನೂರು ಮತದಾನ ಉಡುಪಿ ಜಿಲ್ಲೆಯ ವಾಗ್ದಾನ ಎಂಬ ಘೋಷ ವಾಕ್ಯವನ್ನು ಕೂಗುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ ಮಾತನಾಡಿ, ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದೆ. ಚುನಾವಣೆಯ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಸ್ನೇಹಿತರಿಗೆ, ನೆರೆಹೊರೆಯವರಿಗೆ ಹಾಗೂ ಹಿರಿಯರಲ್ಲಿ ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಬೇಕು ಎಂದರು.ಉಡುಪಿ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾವುದೇ ಕಾರ್ಯಕ್ರಮ ಹಾಗೂ ಸಮಾರಂಭದಲ್ಲಿ ಪ್ಲಾಸ್ಟಿಕ್ ಗ್ಲಾಸ್, ಪ್ಲಾಸ್ಟಿಕ್ ತಟ್ಟೆ ಇತ್ಯಾದಿಗಳನ್ನು ಬಳಸದೇ ಸ್ಟೀಲ್ ಪಾತ್ರೆಗಳನ್ನು ಬಳಸಬೇಕು. ಆ ಮೂಲಕ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ, ಉಡುಪಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛ ಸುಂದರ ಉಡುಪಿಯನ್ನಾಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆಯ ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಸುರೇಶ್ ಶೆಟ್ಟಿ, ಭೋಜ ನಾಯ್ಕ ಹಾಗೂ ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿಗಳಾದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ವಿದ್ಯಾ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ನಿಕೇತನ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಂತರ ಅಜ್ಜರಕಾಡು ಪಾರ್ಕ್ ಸ್ವಚ್ಛತಾ ಕಾರ್ಯದಲ್ಲೂ ಪಾಲ್ಗೊಂಡರು.