ಉತ್ತಮ ಸೇವೆಗೆ ಸಹಕಾರ ನೀಡಲು ಬದ್ಧ

| Published : Oct 10 2024, 02:18 AM IST

ಸಾರಾಂಶ

ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೇಮಕಗೊಳಿಸುವ ಜೊತೆಗೆ ಉತ್ತಮ ಸೇವೆ ಕಲ್ಪಿಸಿಕೊಡಲು ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.

ಬುಧವಾರ ಸುಮಾರು 1.95 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸ ಕಟ್ಟಡದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳು, ವೈದ್ಯರು ಹಾಗೂ ಸಿಬ್ಬಂದಿಗಳು ನೇಮಕಗೊಳಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ಇಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹಗಳನ್ನು ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಮಾತನಾಡಿ, ಅಸ್ಪತ್ರೆ ನೂತನ ಕಟ್ಟಡ ಉದ್ಘಾಟನೆಗೊಳ್ಳಲು ಶಾಸಕರ ಪರಿಶ್ರಮ ಹೆಚ್ಚಿನದ್ದಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳಿಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಸದ್ಬಳಕೆ ಮಾಡಿಕೊಳ್ಳಕೊಂಡು ಉತ್ತಮ ಸೇವೆ ನೀಡಬೇಕು ಎಂದು ತಿಳಿಸಿದರು.

ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಮಾತನಾಡಿದರು. ನಗರಸಭೆ ಸದಸ್ಯ ಚನ್ನಪ್ಪ ನೂತನ ಕಟ್ಟಡ ನಿರ್ಮಾಣಗೊಳ್ಳಲು ಕಾರಣಕರ್ತರಾದ ಶಾಸಕರು, ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಶಶಿಕಲಾ ನಾರಾಯಣಪ್ಪ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್.ಮಣಿಶೇಖರ್, ಜಿಪಂ ಮಾಜಿ ಸದಸ್ಯ ಎಸ್.ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಎರೆಹಳ್ಳಿ ಗ್ರಾಪಂ ಸದಸ್ಯ ಶಿವರಾಂ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣಪ್ಪ ಸೇರಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪಿ.ಜಿ. ವಿಶ್ವನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ವಾಗತಿಸಿದರು.