ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ ಸ್ವಚ್ಛತೆ ಕಾಪಾಡುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರು ಸಹಕರಿಸಬೇಕು ಎಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮನವಿ ಮಾಡಿದ್ದಾರೆ.ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜ್ವರ ಕಾಣಿಸಿಕೊಂಡು ಖಾಸಗಿ ಆಸ್ಪತ್ರೆಗಳಿಗೆ ಬರುವವರಿಗೂ ಕೂಡ ತಕ್ಷಣ ಡೆಂಘೀ ಪರೀಕ್ಷೆ ಮಾಡಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಲು ೫೪ ಕೋಟಿಯಷ್ಟು ಅನುದಾನದ ಅಗತ್ಯವಿದೆ, ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಮಾರ್ಚ್ ತಿಂಗಳಲ್ಲಿ ಉದ್ಘಾಟನೆ ಮಾಡಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಸೇವೆ ನೀಡಲು ಉಪಕರಣಗಳ ಅವಶ್ಯಕತೆ ಇದ್ದು, ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.ಹಿಮ್ಸ್ ಕಾಲೇಜಿನಲ್ಲಿ ೧೬ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ ಭರ್ತಿ ಮಾಡಲಾಗುವುದು ಹಾಗೂ ಹೆಚ್ಚುವರಿಯಾಗಿ ೧೬ ಪ್ರಾಧ್ಯಾಪಕರ ಹುದ್ದೆಗಳಿಗೆ ಬೇಡಿಕೆ ಇದ್ದು ,ಇದರ ಬಗ್ಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಈಗಾಗಲೇ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ೧೨೦೦ ಬೆಡ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಿದ್ದು ,ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆ ಇದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು ಎಂದರು.ನಂತರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳ ಬಗ್ಗೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ವೈದ್ಯಕೀಯ ಶಿಕ್ಷಣ, ಜೀವನೋಪಾಯ ಹಾಗೂ ಕೌಶಲ್ಯಭಿವೃದ್ದಿ ಇಲಾಖೆಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವ ಕೆ. ಎನ್. ರಾಜಣ್ಣ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭೇಟಿ ನೀಡಿ ಪರಿಶೀಲಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಹಿಸಿನ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಥೋಡ್, ಹಿಮ್ಸ್ ಪ್ರಭಾರ ನಿರ್ದೇಶಕ ರಾಜಣ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಲೋಕೇಶ್, ಮುಖ್ಯ ಆಡಳಿತಾಧಿಕಾರಿ ರೇಖಾ, ವೈದ್ಯಕೀಯ ಅಧೀಕ್ಷಕ ರಾಘವೇಂದ್ರ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.