ಸಾರಾಂಶ
ಬೆಂಗಳೂರು : ಚುನಾಯಿತ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದ್ದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಹುದ್ದೆ ರದ್ದು ಮಾಡಿ ಒಕ್ಕೂಟ ವ್ಯವಸ್ಥೆ ಉಳಿಸುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಆಗ್ರಹಿಸಿದೆ.
ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು, ಜನತಂತ್ರ ವ್ಯವಸ್ಥೆಯಲ್ಲಿ ಜನರಿಂದ ಬಹುಮತದ ಮೂಲಕ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷದ ಕುಟಿಲ ನೀತಿ ಬಹಿರಂಗವಾಗುತ್ತಿದೆ. ಈ ಹಿನ್ನೆಲೆ ರಾಜ್ಯಪಾಲ ಹುದ್ದೆ ರದ್ಧತಿಗೆ ಈಗ ಸಕಾಲವಾಗಿದೆ. ಸಂವಿಧಾನಬದ್ಧ ಒಕ್ಕೂಟ ವ್ಯವಸ್ಥೆ ಉಳಿಸಲು ರಾಜ್ಯದ ಸ್ವಾಯತ್ತ ಅಧಿಕಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ನಿಲ್ಲಿಸಲು ರಾಜ್ಯಪಾಲರ ಹುದ್ದೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಮುಡಾ ಮತ್ತು ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣದ ನಿಪ್ಷಕ್ಷಪಾತ ತನಿಖೆ ನಡೆಯಬೇಕು. ಆದರೆ, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬಂದಿದೆ. ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆ ಇತರೆ ಪ್ರಕರಣದಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು, ಮುಡಾ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಮಾನ ಪೂರ್ಣ ರಾಜಕೀಯ ಪ್ರೇರಿತ ಎಂಬುದು ಸಾಕ್ಷಿ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತಮಿಳುನಾಡು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಇದು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದ್ದು ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಿ ಚುನಾಯಿತ ರಾಜ್ಯ ಸರ್ಕಾರಗಳನ್ನು ಉಳಿಸಬೇಕೆಂದು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.