ಬಾಲ್ಯವಿವಾಹ ತಡೆಯಲು ಸಮುದಾಯ ಸಹಕಾರ ಅಗತ್ಯ

| Published : Oct 19 2024, 01:39 AM IST

ಸಾರಾಂಶ

ದೊಡ್ಡಬಳ್ಳಾಪುರ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳನ್ನು ತಡೆಯಲು ಕಾನೂನಿನ ಅರಿವಿನೊಂದಿಗೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್‌ ತಿಳಿಸಿದರು.

ದೊಡ್ಡಬಳ್ಳಾಪುರ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳನ್ನು ತಡೆಯಲು ಕಾನೂನಿನ ಅರಿವಿನೊಂದಿಗೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್‌ ತಿಳಿಸಿದರು.

ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ದೊಡ್ಡಬಳ್ಳಾಪುರ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದ ಭಾಗವಾಗಿ ನಡೆದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನದ ಜೊತೆಗೆ ರಾಜ್ಯ ಸರ್ಕಾರದ ನಿರ್ದಿಷ್ಟ ಯೋಜನೆಗಳು ಹೆಣ್ಣು ಮಕ್ಕಳ ಸಮಗ್ರ ಪ್ರಗತಿಗೆ ಪೂರಕವಾಗಿವೆ ಎಂದು ತಿಳಿಸಿದರು.

ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಹೆಣ್ಣು ಮಕ್ಕಳ ಸಬಲೀಕರಣ ಪ್ರಧಾನ ಆದ್ಯತೆಯಾಗಿಟ್ಟುಕೊಂಡು ಅನೇಕ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿವೆ. ಲಿಂಗ ಅಸಮಾನತೆ ಹೋಗಲಾಡಿಸುವ ಮೂಲಕ ಸಾಮಾಜಿಕ ಸಮಾನತೆ ಸಾಧಿಸುವುದು ಅಗತ್ಯ. ಹೆಣ್ಣು ಭ್ರೂಣ ಹತ್ಯೆ ನಿಯಂತ್ರಿಸುವುದು ಅತ್ಯಗತ್ಯ. ಎಲ್ಲ ವಲಯಗಳಲ್ಲಿ ಲಿಂಗ ಸಮಾನತೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಜ್ಞಾವಂತ ಹೆಣ್ಣು ಮಕ್ಕಳ ಹೊಣೆಗಾರಿಕೆಯೂ ಮುಖ್ಯ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಪ್ರಮಾಣ ಹೆಚ್ಚಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯೂ ಒಂದಾಗಿದೆ. ಹೆಣ್ಣು ಮಕ್ಕಳ ಶಿಕ್ಷಣ ಉತ್ತೇಜಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸುವುದು ಅಗತ್ಯ. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ಅವರಿಗೆ ಸುರಕ್ಷಿತ ಬದುಕಿನ ಭರವಸೆ ಮೂಡಿಸಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಉಪ ಯೋಜನಾಧಿಕಾರಿ ಅರುಣ್‌ಕುಮಾರ್, ಹಾಸ್ಟೆಲ್‌ ವಾರ್ಡನ್‌ ರಾಧಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

(ಫೋಟೋ ಕ್ಯಾಪ್ಷನ್‌)

ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು.