ಜ.19 ಮತ್ತು 25 ರಂದು ಕೆಪಿಎಸ್‍ಸಿ ವತಿಯಿಂದ ಗ್ರೂಪಿ ಬಿ ಹುದ್ದೆಗಳಿಗೆ ಸ್ಪರ್ದಾತ್ಮಕ ಪರೀಕ್ಷೆ

| Published : Jan 17 2025, 12:46 AM IST / Updated: Jan 17 2025, 12:33 PM IST

ಜ.19 ಮತ್ತು 25 ರಂದು ಕೆಪಿಎಸ್‍ಸಿ ವತಿಯಿಂದ ಗ್ರೂಪಿ ಬಿ ಹುದ್ದೆಗಳಿಗೆ ಸ್ಪರ್ದಾತ್ಮಕ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

  ಚಿತ್ರದುರ್ಗ : ಜ.19 ಮತ್ತು 25 ರಂದು ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕಡ್ಡಾಯವಾಗಿ ಕೆಪಿಎಸ್‍ಸಿ ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳನ್ನು ತಡೆಯುವ ದೃಷ್ಟಿಯಿಂದ ಕೆಪಿಎಸ್‍ಸಿ ಪರೀಕ್ಷಾ ಮಾರ್ಗಸೂಚಿಗಳನ್ನು ರೂಪಿಸಿದೆ. ಆನ್‍ಲೈನ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳುವ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಈ ಸೂಚನೆಗಳು ಓದಿ ಪಾಲಿಸಬೇಕು. ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಚುನಾವಣಾ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್‌ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಮೂಲ ಗುರುತಿನ ಚೀಟಿ ಪರಿಶೀಲನೆ ನಂತರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದರು.

ಕೊಠಡಿಯೊಳಗೆ ಆಧುನಿಕ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್‍ಲೆಸ್ ಸೆಟ್ಸ್, ಪೇಪರ್, ಬುಕ್‍ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸುವಂತಿಲ್ಲ. ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಇತರೆ ಆಭರಣಗಳು ಪುಲ್‍ವೋವರ್ಸ್, ಜಾಕೆಟ್ ಮತ್ತು ಸ್ವೆಟರ್ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಿದೆ. ಕಿವಿ, ಬಾಯಿ ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ಮೆಟಲ್ ವಾಟರ್ ಬಾಟೆಲ್ ಅಥವಾ ನಾನ್ ಟ್ರಾನ್ಫರೆಂಟ್ ವಾಟರ್ ಬಾಟಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಎಂದರು.

ಆಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಯುವ ನಿಟ್ಟಿನಲ್ಲಿ ಮೆಟಲ್ ಡಿಟೆಕ್ಟರ್ ಹಾಗೂ ಎಲ್‍ಇಡಿ ಬ್ಯಾಟರಿ ಬಳಸಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಲಾಗುವುದು. ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳಿಂದ ಫ್ರಿಸ್ಕಿಂಗ್ ಕಾರ್ಯವನ್ನು ನೆರವೇರಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾಗಿದ್ದು ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‍ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಒಎಂಆರ್ ಬಂಡಲ್‍ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಒಎಂಆರ್ ಬಂಡಲ್‍ಗಳು ತಲುಪುವವರೆಗೂ ತಪ್ಪದೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಖಜಾನಾಧಿಕಾರಿ ರಮೇಶ್ ಮಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್, ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇದರೊಂದಿಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳುವರು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ದೃಷ್ಠಿಯಿಂದ ಜ.19 ಹಾಗೂ 25ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್ 114 ವಿಧಿಸಿ ನಿಷೇಧಾಜ್ಞೆ ಜಾರಿ ಮಾಡಿ, ಆದೇಶ ಹೊರಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

21 ಪರೀಕ್ಷಾ ಕೇಂದ್ರ 7783 ಅಭ್ಯರ್ಥಿಗಳು

ಜ.19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 11:30 ರವರೆಗೆ ಪತ್ರಿಕೆ-01 ಹಾಗೂ ಜ.25 ರಂದು ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ಪತ್ರಿಕೆ-02ರ ಪರೀಕ್ಷೆ ನಡೆಯಲಿದೆ. ನಗರದಲ್ಲಿ 21 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7,783 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.