ಕಳೆದ ಆ.19ರಂದು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಸಮಸ್ಯೆ ಕೇಳಲು ಮುಂದಾದ ಮಾಜಿ ಸದಸ್ಯ ಪಾರ್ಥಸಾರಥಿ ಅವರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಪಾರ್ಥಸಾರಥಿ ವಿರುದ್ಧವೇ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ದೂರು ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪುರಸಭೆ ಮುಖ್ಯಾಧಿಕಾರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಸಾರ್ವಜನಿಕ ಸಮಸ್ಯೆ ಕೇಳಲು ಹೋದರೆ ದರ್ಪ ತೋರಿ ಮಾಜಿ ಸದಸ್ಯರ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಪುರಸಭೆ ಮಾಜಿ ಸದಸ್ಯರು ಪೊಲೀಸ್ ಠಾಣೆಗೆ ದೂರು ನೀಡಿದರು.

ಪಟ್ಟಣದ ಪೊಲೀಸ್ ಠಾಣೆಗೆ ತೆರಳಿದ ಪುರಸಭೆ ಎಲ್ಲಾ ಮಾಜಿ ಸದಸ್ಯರು, ಮುಖ್ಯಾಧಿಕಾರಿ ಸತೀಶ್ ಕುಮಾರ್ ವಿರುದ್ಧ ದೂರು ಸಲ್ಲಿಸಿ ಅವರ ಮೇಲೆ ಪ್ರಕರಣ ದಾಖಲು ಮಾಡಬೇಕು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶರತ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಉಮೇಶ್ ಅವರಿಗೆ ದೂರು ಸಲ್ಲಿಸಿದರು.

ಕಳೆದ ಆ.19ರಂದು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಸಮಸ್ಯೆ ಕೇಳಲು ಮುಂದಾದ ಮಾಜಿ ಸದಸ್ಯ ಪಾರ್ಥಸಾರಥಿ ಅವರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಪಾರ್ಥಸಾರಥಿ ವಿರುದ್ಧವೇ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ದೂರು ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ನಾವು ನೀಡಿರುವ ದೂರನ್ನು ಸಹ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪುರಸಭೆ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿ ಆಡಳಿತಾಧಿಕಾರಿಗಳನ್ನು ನೇಮಿಸಿದ್ದಾರೆ. ಹಾಗಾಗಿ ಮುಖ್ಯಾಧಿಕಾರಿ ಸತೀಶ್ ಕುಮಾರ್ ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ. ಅವರ ಕೈಕೆಳಗಿನ ಅಧಿಕಾರಿ ಸಿಬ್ಬಂದಿ, ಸಮಸ್ಯೆ ಹೊತ್ತೋಗುವ ಸಾರ್ವಜನಿಕರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಈತ ಒಬ್ಬ ದೊಡ್ಡ ಭ್ರಷ್ಟಾಚಾರಿ. ಈ ಹಿಂದೆ ಈತ ಎಲ್ಲಿ ಕೆಲಸ ಮಾಡಿರುವ ಎಲ್ಲಾ ಕಡೆಯಲ್ಲೂ ಇದೇ ರೀತಿ ವರ್ತಿಸಿದ್ದಾರೆ. ಕೆ.ಆರ್.ಪೇಟೆ, ಹಾಸನದಲ್ಲೂ ಸಹ ಇದೇ ರೀತಿ ಸಾರ್ವಜನಿಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ಪೊಲೀಸರು ಈತನ ಎಲ್ಲಾ ವರ್ತನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಪರಿಶೀಲಿಸಿ ತನಿಖೆ ನಡೆಸಬೇಕು. ನಾನು ಕೊಟ್ಟಿರುವ ದೂರುನ್ನು ಸ್ವೀಕರಿಸಿ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ದೂರು ದಾಖಲಿಸಬೇಕು ಎಂದು ಮನವಿ ಮಾಡಿದರು.

ದೂರು ಸ್ವೀಕರಿಸಿದ ಸರ್ಕಲ್ ಇನ್ಸ್ ಪೆಕ್ಟರ್ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷರಾದ ಆರ್.ಸೋಮಶೇಖರ್, ಎಂ.ಗಿರೀಶ್, ಜ್ಯೋತಿಲಕ್ಷ್ಮಿಬಾಬು, ಮಾಜಿ ಸದಸ್ಯರಾದ ಚಂದ್ರು, ಶಿವಕುಮಾರ್, ಪಾರ್ಥಸಾರಥಿ, ಗೀತ, ಜಯಲಕ್ಷ್ಮಮ್ಮ, ಇಮ್ರಾನ್, ಅಶೋಕ್, ಟಿಎಪಿಸಿಎಂಎಸ್ ನಿರ್ದೇಶಕ ಆದರ್ಶ, ಜಯರಾಮು, ಉಮೇಶ್ ಸೇರಿದಂತೆ ಹಲವರು ಹಾಜರಿದ್ದರು.