ಕನ್ನಡಪ್ರಭ ವಾರ್ತೆ ಬೆಳಗಾವಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾದ ಅನುದಾನವನ್ನು ಜಿಲ್ಲಾಡಳಿತ ಸಮರ್ಪಕವಾಗಿ ಬಳಕೆ ಮಾಡಿಲ್ಲ. ಕನ್ನಡ ಹಬ್ಬ ವಿಚಾರದಲ್ಲಿ ಜಿಲ್ಲಾಧಿಕಾರಿ ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕನ್ನಡ ರಾಜ್ಯೋತ್ಸವ ಆಚರಣೆಗೆ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾದ ಅನುದಾನವನ್ನು ಜಿಲ್ಲಾಡಳಿತ ಸಮರ್ಪಕವಾಗಿ ಬಳಕೆ ಮಾಡಿಲ್ಲ. ಕನ್ನಡ ಹಬ್ಬ ವಿಚಾರದಲ್ಲಿ ಜಿಲ್ಲಾಧಿಕಾರಿ ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ತಿಳಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಹಬ್ಬ ಕಾರ್ಯಕ್ರಮ ವಿಚಾರದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಎಂಟು ಬಾರಿ ಸಭೆ ನಡೆಸಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವುದು ಖಂಡನೀಯ. ಕನ್ನಡಪರ ಸಂಘಟನೆಗಳೊಂದಿಗೆ ಸಂವಹನ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿಯೇ ಒಪ್ಪಿಕೊಂಡಿರುವುದು ದ್ವಂದ್ವ ನಿಲುವು ತೋರಿಸುತ್ತದೆ ಎಂದು ಟೀಕಿಸಿದರು.
ಸರ್ಕಾರದ ಸುತ್ತೋಲೆಯಲ್ಲಿ ಕನ್ನಡಪರ ಸಂಘಟನೆಗಳ ಮೂಲಕವೇ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಅದನ್ನು ಉಲ್ಲಂಘಿಸಿ ಏಕಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಮಾರು ₹ 3 ಲಕ್ಷ ಸಂಘಟನೆಗಳ ಅನುಮತಿ ಇಲ್ಲದೆ ಬೇರೊಂದು ಕಾರ್ಯಕ್ರಮಕ್ಕೆ ನೀಡಿರುವುದು ಹಾಗೂ ನಾಡಹಬ್ಬ ರಸಮಂಜರಿ ಕಾರ್ಯಕ್ರಮವನ್ನು ಪೂರ್ವ ಮಾಹಿತಿ ಇಲ್ಲದೆ ಆಯೋಜಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.ರಾಜ್ಯೋತ್ಸವದ ಅನುದಾನದಲ್ಲಿ ಅನೇಕ ಕಾರ್ಯಕ್ರಮ ನಡೆಸಬಹುದಾಗಿದ್ದರೂ, ಒಂದೇ ಕಾರ್ಯಕ್ರಮಕ್ಕೆ ಹೆಚ್ಚಿನ ಮೊತ್ತ ವ್ಯಯಿಸಿ ತರಾತುರಿಯಲ್ಲಿ ಆಚರಣೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಜಿಲ್ಲಾಧಿಕಾರಿ ಸರ್ವಾಧಿಕಾರಿ ಧೋರಣೆ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ, ಶ್ರೀನಿವಾಸ ತಾಳೂಕರ, ಕಸ್ತೂರಿ ಭಾವಿ ಮೊದಲಾದವರು ಉಪಸ್ಥಿತರಿದ್ದರು.