ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಲು ಜಿಲ್ಲಾಡಳಿತಕ್ಕೆ ದೂರು

| Published : Apr 17 2024, 01:15 AM IST

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಲು ಜಿಲ್ಲಾಡಳಿತಕ್ಕೆ ದೂರು
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಕುಂಚಿಟಿಗರ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು

ಕನ್ನಡಪ್ರಭ ವಾರ್ತೆ ತುಮಕೂರುನಗರದ ಕುಂಚಿಟಿಗರ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಎಸ್. ಸುರೇಶ್‌ಕುಮಾರ್ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ಕಾನೂನು ವಿಭಾಗದಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‌ಕುಮಾರ್‌ಗೆ ಮನವಿ ಸಲ್ಲಿಸಲಾಯಿತು.ಕಾರ್ಯಕರ್ತರ ಸಭೆಯಲ್ಲಿ ಭದ್ರತೆವಹಿಸಿದ್ದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಈ ಘಟನೆಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಎಸ್. ಸುರೇಶ್‌ಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಜನರನ್ನು ಎತ್ತಿಕಟ್ಟುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಜಣ್ಣರ ಪ್ರಚೋದನೆಯಿಂದ ಈ ಘಟನೆ ನಡೆದಿದೆ. ಕಾರ್ಯಕರ್ತರ ಮತ್ತು ಮತದಾರರಲ್ಲಿ ಭಯವನ್ನು ಹುಟ್ಟು ಹಾಕುವ ಮೂಲಕ ದೇವೇಗೌಡರ ಪ್ರಚಾರ ತಪ್ಪಿಸುವ ಉದ್ದೇಶ ಹೊಂದಿದ್ದಾರೆ. ಘಟನೆ ನಡೆದಾಗ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಮಾಜಿ ಪ್ರಧಾನಿ ಕಾರ್ಯಕ್ರಮದಲ್ಲಿ ಉಂಟಾದ ಭದ್ರತಾ ಲೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪಿತೂರಿಯ ಹಿಂದೆ ಇರುವ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು. ದೇವೇಗೌಡರಿಗೆ ರಾಷ್ಟ್ರದಲ್ಲಿ ಮಹತ್ವದ ಸ್ಥಾನ ಇದೆ. ಆದರೂ ಅವರ ಕಾರ್ಯಕ್ರಮದಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ದುರುದ್ದೇಶವನ್ನು ಹೊಂದಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಆಡಳಿತ ಪಕ್ಷದ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ನಡುವೆ ವೈಷಮ್ಯ ಹುಟ್ಟುಹಾಕಿ ಅಶಾಂತಿ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.

ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ಮಾತನಾಡಿ, ಮಾಜಿ ಪ್ರಧಾನಿ ಕಾರ್ಯಕ್ರಮದಲ್ಲಿ ಈ ರೀತಿಯ ಘಟನೆ ನಡೆಯಲು ಪೊಲೀಸರ ಭದ್ರತಾ ವೈಫಲ್ಯ ಕಾರಣವಾಗಿದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಸಾತ್ವಿಕ ಚುನಾವಣೆಗೆ ಕಷ್ಟವಾಗುತ್ತದೆ. ಚುನಾವಣೆಯಲ್ಲಿ ಪೊಲೀಸರನ್ನು ಹಣ ಸಾಗಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಕಾನೂನು ಘಟಕದ ರಾಜ್ಯಾಧ್ಯಕ್ಷ ವಸಂತಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು, ಹಿಮಾನಂದ್, ಬ್ಯಾಟರಂಗೇಗೌಡ, ವಕೀಲರಾದ ರೇಖಾ ರಾಜುಗೌಡ, ರವಿಗೌಡ, ಮಹೇಶ್, ರೇಣುಕೇಶ್, ಪ್ರಕಾಶ್‌ರಾವ್, ರಮೇಶ್, ನವೀನ್ ಚಂದ್ರಶೆಟ್ಟಿ ಇದ್ದರು.