ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಎಸ್ಪಿಗೆ ದೂರು

| Published : Aug 20 2024, 01:00 AM IST

ಸಾರಾಂಶ

೨೦೧೧ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್‌ನವರು ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಆಗ ಇದ್ದ ಸಂವಿಧಾನದನ್ವಯವೇ ಈಗಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನ, ಬಹುವಚನ, ಗುಣಸಂಧಿ, ಸವರ್ಣದೀರ್ಘ ಸಂಧಿಯ ಬಗ್ಗೆ ಹಿತವಚನ ಬೋಧಿಸುತ್ತಾರೆ, ಆದರೆ ಸ್ವಪಕ್ಷದ ಶಾಸಕ ನರೇಂದ್ರಸ್ವಾಮಿ ಅವರಿಗೆ ವ್ಯಾಕರಣದ ಪಾಠ ಹೇಳಿಕೊಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರಪತಿಗಳಿಂದ ನೇಮಕವಾದ ರಾಜ್ಯಪಾಲರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಯ ಹೊಣೆ ಹೊತ್ತಿದ್ದಾರೆ, ಇಂತಹ ಗೌರವಾನ್ವಿತ ಹುದ್ದೆಯಲ್ಲಿರುವವರ ಬಗ್ಗೆ ಏಕವಚನದಲ್ಲಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತಂದಿದ್ದಾರೆ, ಜೊತೆಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ಬಗ್ಗೆಯೂ ಕೀಳು ಮಟ್ಟದ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದರು

೨೦೧೧ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್‌ನವರು ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಆಗ ಇದ್ದ ಸಂವಿಧಾನದನ್ವಯವೇ ಈಗಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು. ದುರಾಭಿಮಾನಕ್ಕೊಳಗಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಶೋಭೆ ತರುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಪಡಿಸಿದರು.

ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಾಗಾನಂದ್, ಶಿವಕುಮಾರ್, ಹನುಮಂತು, ಪ್ರಸನ್ನ, ಚಂದ್ರು ಇದ್ದರು.