ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸಾರ್ವಜನಿಕರು, ಉದ್ಯಮಿದಾರರು ಸಿಗದಿದ್ದಲ್ಲಿ ಬಿಎಲ್‌ಒಗಳು ಯಾವುದೇ ರೀತಿಯ ಉದಾಸೀನತೆ ತೋರಬಾರದು.

ಹೊಸಪೇಟೆ: ಜುಲೈ 5ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಪಂ ಆಡಳಿತಾಧಿಕಾರಿ ಡಾ.ಕೆ.ಜಿ. ಜಗದೀಶ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸಾರ್ವಜನಿಕರು, ಉದ್ಯಮಿದಾರರು ಸಿಗದಿದ್ದಲ್ಲಿ ಬಿಎಲ್‌ಒಗಳು ಯಾವುದೇ ರೀತಿಯ ಉದಾಸೀನತೆ ತೋರಬಾರದು. ಇಂತಹ ಬೇಜವಾಬ್ದಾರಿತನದಿಂದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಹಲವು ತಾಂತ್ರಿಕ ಹಾಗೂ ಕಾನೂನಾತ್ಮಕ ತೊಡಕುಗಳು ಎದುರಿಸಬೇಕಾಗುತ್ತದೆ. ಹಿರಿಯ ಅಧಿಕಾರಿಗಳು ಈ ಕುರಿತು ಬಿಎಲ್‌ಒಗಳಿಗೆ ಪ್ರತಿದಿನ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುತ್ತಾ ಕಾರ್ಯದ ಪ್ರಗತಿಯನ್ನು ಪರಿಶೀಲಿಸಬೇಕು ಎಂದರು.

ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿದಾಗ ನಿಖರ ಹಾಗೂ ಸ್ಪಷ್ಟ ಮಾಹಿತಿಯನ್ನೇ ದಾಖಲಿಸಬೇಕು. ಪೂರ್ಣ ಆಸಕ್ತಿಯಿಂದ ಕೆಲಸ ಮಾಡಿದರೆ ಶೇ.99ರಷ್ಟು ಗುರಿ ಸಾಧಿಸಬಹುದು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವ ನಾಗರಿಕರ ಬಗ್ಗೆ ವಿಶೇಷ ಗಮನ ಹರಿಸಿ, ಮಾಹಿತಿ ಕಲೆ ಹಾಕಿ ಎಚ್ಚರಿಕೆಯಿಂದ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ಬಿಎಲ್‌ಎಗಳು ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳ ನೆರವು ಪಡೆದು ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಪ್ರಸಕ್ತ ವರ್ಷ ಮುಂಗಾರು ಮಾನ್ಸೂನ್ ಮಳೆ ನಿರೀಕ್ಷಿತ ಮಟ್ಟದಲ್ಲಿ ಆಶಾದಾಯಕವಾಗಿಲ್ಲ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಪ್ರಮುಖ ಪಾತ್ರ ವಹಿಸಲಿದೆ. ಸದ್ಯದ ಹವಾಮಾನ ಪರಿಸ್ಥಿತಿಗೆ ತಕ್ಕಂತೆ ಪರ್ಯಾಯ ಹವಾಮಾನ ಆಧಾರಿತ ಬಿತ್ತನೆ ಬೀಜಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಯಾವುದೇ ಲೋಪದೋಷಗಳಿಲ್ಲದೇ ಅತ್ಯಂತ ಪಾರದರ್ಶಕವಾಗಿ ಬೆಳೆ ಸಮೀಕ್ಷೆ ನಡೆಸಬೇಕು. ಮಳೆ ಕೊರತೆ ಅಥವಾ ನೆರೆಯಿಂದ ಬೆಳೆ ಹಾನಿಯುಂಟಾಗುವುದರಿಂದ ರೈತರ ಆರ್ಥಿಕ ನಷ್ಟ ತುಂಬಲು ಅವರ ಹಿತರಕ್ಷಣೆಗಾಗಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ, ಅತ್ಯಂತ ಜವಾಬ್ದಾರಿಯಿಂದ ಸಕ್ರಿಯವಾಗಿ ಪಾಲ್ಗೊಂಡು ಜುಲೈ 5ರೊಳಗೆ ನಿಗದಿಪಡಿಸಿದ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಎಸ್‌ಐಆರ್ ನೋಂದಣಿ ಪ್ರಕ್ರಿಯೆಯನ್ನು ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ನಿಭಾಯಿಸುವಂತೆ ಬಿಎಲ್‌ಒಗಳಿಗೆ ಪ್ರತಿದಿನ ಸೂಕ್ತ ನಿರ್ದೇಶನ ನೀಡುವುದರ ಜತೆಗೆ ಪ್ರಗತಿ ಪರಿಶೀಲಿಸಲಾಗುವುದು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನೋಂದಣಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಶೇ.100ರಷ್ಟು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಬಿಎಲ್‌ಒಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ. ಕಾಳೆ, ತಹಶೀಲ್ದಾರ್ ಶ್ರುತಿ ಎಂ. ಮಾಳಪ್ಪ ಗೌಡರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.