ಸಾರಾಂಶ
ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ: ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಹಿಟ್ನಾಳ ಗ್ರಾಮದ ಶ್ರೀನಗರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಹಿಟ್ನಾಳ್ ಹೋಬಳಿ ಮಟ್ಟದ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ವಿವಿಧ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ಯೋಜನೆಗಳಲ್ಲಿ ಎಲ್ಲರ ಸಹಕಾರ, ಸಮನ್ವಯತೆ ಅಗತ್ಯವಿದೆ. ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶ್ರಮಿಸಬೇಕು. ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಮುಕ್ತಾಯವಾಗಬೇಕು ಎಂದರು.
ನರೇಗಾ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ವಚ್ಛ ಭಾರತ ಮಿಷನ್, ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಗಳಲ್ಲಿ ಎಲ್ಲರೂ ಭಾಗವಹಿಸುವ ಜತೆಗೆ ಕೃಷಿ, ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ರೈತರಿಗೆ ತಲುಪಿಸಲು ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. ಗ್ರಾಪಂ ಸದಸ್ಯರು ಗ್ರಾಮಕ್ಕೆ ಅವಶ್ಯವಿರುವ ಸೌಲಭ್ಯ, ಕಾಮಗಾರಿ ಕುರಿತು ಮನವಿ ಸಲ್ಲಿಸಿದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಹೊಸಪೇಟೆ, ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠಲ್ ಚೌಗಲಾ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಬಾಲಚಂದ್ರನ್, ಉಪಾಧ್ಯಕ್ಷ ರಾಜಶೇಖರ ಬಂಡಿಹಾಳ, ತಾಲೂಕು ಮಟ್ಟದ ಅಧಿಕಾರಿಗಳು, ಹಿಟ್ನಾಳ್ ಹೋಬಳಿ ವ್ಯಾಪ್ತಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.