ಮೆಟ್ರಿ, ನಂ.10 ಮುದ್ದಾಪುರ, ಕಣಿವಿ ತಿಮ್ಮಲಾಪುರ ಹಾಗೂ ದೇವಸಮುದ್ರ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಗುರುವಾರ ಪರಿಶೀಲಿಸಿದರು
ಕಂಪ್ಲಿ: ತಾಲೂಕಿನ ಮೆಟ್ರಿ, ನಂ.10 ಮುದ್ದಾಪುರ, ಕಣಿವಿ ತಿಮ್ಮಲಾಪುರ ಹಾಗೂ ದೇವಸಮುದ್ರ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಗುರುವಾರ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಸಕಾಲಕ್ಕೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆ ಮಾಡುವುದು ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಮಗಾರಿಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಪೈಪ್‌ಲೈನ್‌ನಲ್ಲಿ ನೀರಿನ ಸೋರಿಕೆ ಕಂಡುಬಂದಲ್ಲಿ ಕೂಡಲೇ ದುರಸ್ತಿ ಮಾಡಬೇಕು. ಕುಡಿಯುವ ನೀರು ವ್ಯರ್ಥವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.ನೀರಿನ ಮೌಲ್ಯವನ್ನು ಸಾರ್ವಜನಿಕರಿಗೆ ತಿಳಿಸುವ ಮೂಲಕ ಮಿತ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡದಂತೆ ಹಾಗೂ ನೀರನ್ನು ವ್ಯರ್ಥವಾಗಿ ಹರಿಯಲು ಬಿಡದಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಬೇಕು ಎಂದರು.
ಬುಕ್ಕಸಾಗರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್‌ನಿಂದ ರಾಮಸಾಗರ ಗ್ರಾಮದ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಿದರು. ಯೋಜನೆಯಡಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಯೊಂದು ಕುಟುಂಬಕ್ಕೂ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ದೇವಸಮುದ್ರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಿಇಒ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಬಿಸಿಯೂಟದ ಗುಣಮಟ್ಟ ಪರಿಶೀಲಿಸಿದರು.
ಆರ್‌ಡಬ್ಲ್ಯುಎಸ್ ಜೆಇ ರವಿ, ತಾಪಂ ಇಒ ಆರ್.ಕೆ. ಶ್ರೀಕುಮಾರ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್. ಮಲ್ಲನಗೌಡ, ನಂ.10 ಮುದ್ದಾಪುರ ಪಿಡಿಒ ಶಿಲ್ಪಾರಾಣಿ, ದೇವಸಮುದ್ರ ಪಿಡಿಒ ಕೆ.ಎಚ್. ಶಶಿಕಾಂತ ಸೇರಿದಂತೆ ಗ್ರಾಪಂ ಸಿಬ್ಬಂದಿ ಇದ್ದರು.