ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ

| Published : Feb 13 2025, 12:46 AM IST

ಸಾರಾಂಶ

ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ । ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70ರಷ್ಟು ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು.

ಶಿಕಾರಿಪುರ-ಸೊರಬ- ಆನವಟ್ಟಿ ಸೇರಿ 154 ಗ್ರಾಮಗಳಿಗೆ ನೀರು ನೀಡುವ ಬಹುಗ್ರಾಮ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬಹುಗ್ರಾಮ ಮತ್ತು ಇತರೆ ಯೋಜನೆಗಳಿಗೆ ಒಳಪಡದ ಗ್ರಾಮಗಳನ್ನು ಸಹ ಗುರುತಿಸಿ ನೀರು ಕೊಡಲು ವ್ಯವಸ್ಥೆ ಮಾಡಬೇಕು. ಹಾಗೂ ಕುಂಸಿ ಬಹು ಗ್ರಾಮ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯಾರಂಭಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಎಷ್ಟು ಶಾಲೆಗಳು, ಪಿಎಚ್‌ಸಿಗಳು ಮತ್ತು ಅಂಗನವಾಡಿಗಳಲ್ಲಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಡಿಡಿಪಿಐ, ಡಿಎಚ್‌ಓ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ವರದಿ ನೀಡಬೇಕು. ಕುಡಿಯುವ ನೀರಿನ ಸಂಪರ್ಕವಿಲ್ಲದ ಶಾಲೆಗಳು, ಅಂಗನವಾಡಿ ಮತ್ತು ಪಿಎಚ್‌ಸಿಗಳಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಸಂಪರ್ಕ ಒದಗಿಸಲಾಗುವುದು ಎಂದು ತಿಳಿಸಿದರು.

ಕೆಎಫ್‌ಡಿ ಪ್ರಕರಣ ಹೆಚ್ಚಾಗದಂತೆ ತಡೆಗಟ್ಟಿ:

ಜಿಲ್ಲೆಯಲ್ಲಿ ಮುಖ್ಯವಾಗಿ ಮಲೆನಾಡು ಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚಾಗದಂತೆ ಜನರಲ್ಲಿ ಅರಿವು ಮೂಡಿಸಬೇಕು. ಕೆಎಫ್‌ಡಿ ಹರಡಲು ಕಾರಣವಾಗುವ ಉಣ್ಣಿಗಳು ಸಕ್ರಿಯವಾಗಿರುವ ಸಮಯದಲ್ಲಿ ಕಾಡಿಗೆ, ಹೊರಗೆ ಜನರು ಹೋಗದಂತೆ ತಿಳುವಳಿಕೆ ನೀಡಬೇಕು. ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣ ತಾವೇ ಚಿಕಿತ್ಸೆ ಮಾಡಿಕೊಳ್ಳದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ. 67.5 ಪ್ರಗತಿ ಸಾಧಿಸಲಾಗಿದೆ. 2528 ಕಾಮಗಾರಿಗಳಲ್ಲಿ 1707 ಕಾಮಗಾರಿ ಪೂರ್ಣಗೊಂಡಿದ್ದು, 821 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಡಿಎಚ್‌ಒ ಡಾ.ನಟರಾಜ್, ಡಿಎಸ್‌ಒ ಡಾ.ನಾಗರಾಜ್ ನಾಯ್ಕ್, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರ ನೀರು ಸರಬರಾಜು ಮಂಡಳಿ ಎಇ , ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲಾಸ್ಪತ್ರೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ:

ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯು ಸಿಮ್ಸ್ ಬೋಧನಾ ಆಸ್ಪತ್ರೆಯೂ ಆಗಿದ್ದು ಕಾರ್ಯದೊತ್ತಡ ಹೆಚ್ಚಿದೆ. ಅನೇಕ ಕೊರತೆಗಳೂ ಇವೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಆಸ್ಪತ್ರೆಯಲ್ಲಿ ದಟ್ಟಣೆ, ರೋಗಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು ಇತರೆ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ.

ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಸ್ಥಳದಲ್ಲಿ 400 ರಿಂದ 500 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲು ನಗರದಲ್ಲಿ ಒಂದು ಉತ್ತಮ ಜಾಗವನ್ನು ನೋಡಿ, ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಸೂಕ್ತ ಸ್ಥಳ ನೋಡಿ, ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.