ಸಾರಾಂಶ
ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸ್ಥಳಗಳಲ್ಲಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳಾದ ಪಂಪ್‌ಹೌಸ್, ಜಾಕ್ ವೆಲ್, ನೀರು ಶುದ್ಧೀಕರಣ ಘಟಕ, ಪೈಪ್ ಲೈನ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ವೀಕ್ಷಿಸಿದ ಜಿಪಂ ಸಿಇಒ ಕೆ.ಆರ್.ನಂದಿನಿ.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನ ಅಂದಾಜು 790 ಜನವಸತಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಎಲ್ ಅಂಡ್ ಟಿ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸ್ಥಳಗಳಲ್ಲಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳಾದ ಪಂಪ್‌ಹೌಸ್, ಜಾಕ್ ವೆಲ್, ನೀರು ಶುದ್ಧೀಕರಣ ಘಟಕ, ಪೈಪ್ ಲೈನ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ವೀಕ್ಷಿಸಿದರು.
ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳ ಸಂಖ್ಯೆಯನ್ನು ಹೆಚ್ಚು ಮಾಡುವುದು, ಮಳೆಗಾಲ ಆರಂಭಕ್ಕೂ ಮುನ್ನ ಪೈಪ್‌ಲೈನ್ ಅಳವಡಿಸುವುದು, ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ಹಾಗೂ ಕಾಮಗಾರಿಗೆ ಅಗತ್ಯವಿರುವ ಭೂ ಮಂಜೂರಾತಿಯನ್ನು ತ್ವರಿತವಾಗಿ ಪಡೆಯುವಂತೆ ಸ್ಥಳದಲ್ಲಿ ಹಾಜರಿದ್ದ ಎಲ್ ಅಂಡ್ ಟಿ ಸಂಸ್ಥೆಯ ಸಿಬ್ಬಂದಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಮತ್ತು ಸಂಬಂಧಪಟ್ಟ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.ಬಹುಗ್ರಾಮ ಕುಡಿಯುವ ನೀರು ಯೋಜನೆಯಿಂದ ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲ್ಲೂಕುಗಳ 790 ಜನವಸತಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಇದಾಗಿದ್ದು, ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದಲ್ಲಿ ಸಾರ್ವಜನಿಕರಿಗೆ ಕಾವೇರಿ ನದಿಯಿಂದ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತದೆ. ಇದರಿಂದ ಬರಗಾಲದಂತಹ ಸನ್ನಿವೇಶಗಳಲ್ಲಿಯೂ ಸಮರ್ಪಕ ನೀರನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲು ಸಾಧ್ಯ ಎಂದು ತಿಳಿಸಿದರು.