ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ

| N/A | Published : Feb 22 2025, 12:48 AM IST / Updated: Feb 22 2025, 12:23 PM IST

ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದರು.

 ತುಮಕೂರು  : ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ ಯೋಜನೆಗೆ ಹಸ್ತಾಂತರಿಸಬೇಕೆಂದು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಜಿ.ಎನ್.ಅವರಿಗೆ ಸೂಚನೆ ನೀಡಿದರು.

ಲಭ್ಯವಿರುವ ಅನುದಾನವನ್ನು ಭೂಮಾಲೀಕರಿಗೆ ಪಾವತಿಸಿ ಎತ್ತಿನ ಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಸಚಿವರಿಗೆ ಮಾಹಿತಿ ನೀಡಿ, ಯೋಜನೆಯಡಿ ಜಿಲ್ಲೆಯಲ್ಲಿ 150 ಕಿ.ಮೀ. ಗುರುತ್ವಾ ಕಾಲುವೆಯನ್ನು ಹೊಂದಿದ್ದು, ಇದರಲ್ಲಿ 115 ಕಿ.ಮೀ.ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಉಳಿದ 24 ಕಿ.ಮೀ.ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ 3 ಕಡೆ ಅರಣ್ಯ ಪ್ರದೇಶದ ಸಮಸ್ಯೆಯಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸಲಾಗುವುದು ಎಂದು ತಿಳಿಸಿದರು.

 ನಂತರ ಮಾತನಾಡಿದ ಸಚಿವರು, ತುಮಕೂರು-ರಾಯದುರ್ಗ ಯೋಜನೆಗಾಗಿ 1361 ಎಕರೆ ಪ್ರದೇಶವನ್ನು ರೈಲ್ವೆ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಬಾಕಿ ಇರುವ 35 ಎಕರೆ ಭೂಮಿಯನ್ನು 45 ದಿನಗಳೊಳಗಾಗಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು. ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ ಸಭೆಗೆ ಮಾಹಿತಿ ನೀಡಿ, ಈಗಾಗಲೇ 770 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಶಿರಾ ಮತ್ತು ತುಮಕೂರು ತಾಲೂಕಿನಲ್ಲಿ ಮಾತ್ರ 61 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ.

 ಭೂ ಮಾಲೀಕರಿಗೆ ಪರಿಹಾರ ನೀಡಲು 20 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದರು. ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಬಾಕಿ ಇರುವ 576 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಉತ್ತರಿಸಿದ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೇಶ್ ಮಾತನಾಡಿ, ಸ್ವಾಧೀನಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿ ಹಂತದಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿ ಶಿರಾ ತಾಲ್ಲೂಕಿನಲ್ಲಿ 28 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸ್ವಾಧೀನಪಡಿಸಿಕೊಂಡ 280 ಎಕರೆ ಪ್ರದೇಶದ ಭೂ ಮಾಲೀಕರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು. 

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಯೋಜನೆಗಳು, ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ರೈಲ್ವೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.