ನಿಗದಿತ ಅವಧಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ

| Published : Aug 15 2024, 01:52 AM IST

ನಿಗದಿತ ಅವಧಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಯಾವುದೇ ಬಾಕಿ ಕಾಮಗಾರಿಗಳನ್ನು ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಯಾವುದೇ ಬಾಕಿ ಕಾಮಗಾರಿಗಳನ್ನು ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳದೇ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಎಸ್‌ಎಫ್‌ಸಿ ಯೋಜನೆ ಸೇರಿದಂತೆ ಬಾಕಿ ಇರುವ ವಿವಿಧ ಯೋಜನೆಗಳಡಿ ಕಾಮಗಾರಿಗಳನ್ನು ಟೆಂಡರ್ ಕರೆದು ಪೂರ್ಣಗೊಳಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ಯಾವುದಾದರೂ ಸಣ್ಣ ಪುಟ್ಟ ತೊಂದರೆಗಳಿದಲ್ಲಿ ಆದ್ಯತೆ ಮೇಲೆ ನಿಮ್ಮ ಹಂತದಲ್ಲಿ ಪೂರ್ಣಗೊಳಿಸಬೇಕು ಎಂದರು.ಜಿಲ್ಲೆಯಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಬೇಕು. ಮಳೆಗಾಲವಿರುವುದರಿಂದ ಕುಡಿಯುವ ನೀರು ಪೂರೈಸುವ ಸಂದರ್ಭದಲ್ಲಿ ಕಡ್ಡಾಯವಾಗಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ಪೂರೈಕೆ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಡೆಂಘೀ-ಚಿಕುನ್‌ಗುನ್ಯಾ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆ ವಹಿಸಬೇಕು. ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶಕ್ಕೆ ಕ್ರಮ ವಹಿಸಬೇಕು. ಕಾಲಕಾಲಕ್ಕೆ ಔಷಧ ಸಿಂಪಡಣೆ, ಧೂಮಿಕರಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟಿಟನಲ್ಲಿ ಮನೆ-ಮನೆ ತ್ಯಾಜ್ಯ ಸಂಗ್ರಹಿಸುವ ವಾಹನಗಳಲ್ಲಿ ಧ್ವನಿವರ್ಧಕ ಮೂಲಕ ಡೆಂಘೀ ಕುರಿತು ಜಾಗೃತಿ-ಅರಿವು ಮೂಡಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದ ಹಾಗೆ ನೋಡಿಕೊಳ್ಳಬೇಕು. ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ, ೧೫ನೇ ಹಣಕಾಸು ಯೋಜನೆ, ನಗರೋತ್ಥಾನ್, ಆಸ್ತಿ ತೆರಿಗೆ ಹಾಗೂ ನೀರಿನ ತೆರಿಗೆ ಸಂಗ್ರಹ ಕುರಿತು ಪರಿಶೀಲನೆ ನಡೆಸಿದ ಅವರು, ಇಂದಿರಾ ಕ್ಯಾಂಟೀನ್ ಹಂತ-೨ರ ಕಟ್ಟಡ ಪ್ರಗತಿಯ ಮಾಹಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಹುದ್ದೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಮಾತನಾಡಿ, ಬಬಲೇಶ್ವರ ಪಟ್ಟಣ ಪಂಚಾಯತ್ ವ್ಯಾಪ್ತಿ ವಿಸ್ತರಣೆಯ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಆದ್ಯತೆಯನುಸಾರ ಪರಿಗಣಿಸಿ ಮಂಜೂರು ಮಾಡಬೇಕು. ಅದರಂತೆ ಜಿಲ್ಲೆಯಾದ್ಯಂತ ಬಾಕಿ ಇರುವ ಪ್ರಸ್ತಾವನೆಗಳಿಗೆ ಶೀಘ್ರವೇ ಮಂಜೂರು ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಬೇಕು. ತ್ಯಾಜ್ಯ ನಿರ್ವಹಣೆ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಒದಗಿಸಬೇಕು ಎಂದು ತಿಳಿಸಿದರು.ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ ಅವರು, ಸಭೆಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಗ್ರ ಮಾಹಿತಿ ನೀಡಿದರು. ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲ್ ಹಮೀದ್ ಮುಶ್ರೀಫ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ಸಚಿವರ ಆಪ್ತ ಕಾರ್ಯದರ್ಶಿ ಕೆ.ಮುರಳಿಧರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಮುಂತಾದವರು ಇದ್ದರು.