ಸಾರಾಂಶ
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಮುಧೋಳ
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಮೀಕ್ಷೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳ ನಿವಾರಣೆಗೆ ತಾಲೂಕು ಆಡಳಿತ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಚಿವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಮಗ್ರ ಮಾಹಿತಿ ಪಡೆದ ಸಚಿವರು, ವಿಳಂಬಕ್ಕೆ ಕಾರಣವಾಗುತ್ತಿರುವ ಎಲ್ಲ ಗೊಂದಲಗಳನ್ನು ಆದ್ಯತೆ ಮೇಲೆ ಪರಿಹರಿಸುವಂತೆ ನಿರ್ದೇಶಿಸಿದರು. ಮುಧೋಳ ತಾಲೂಕಿನಲ್ಲಿರುವ ಒಟ್ಟು 66,351 ಕುಟುಂಬಗಳ ಪೈಕಿ 33,600 ಕುಟುಂಬಗಳ ಸಮೀಕ್ಷೆ ಕಾರ್ಯ ಮುಗಿದಿದೆ ಎಂದು ಸಭೆಯಲ್ಲಿ ನೀಡಲಾಯಿತು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕೈಗೊಂಡಿರುವ ಈ ಸಮೀಕ್ಷೆ ರಾಜ್ಯದ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅತ್ಯಗತ್ಯವಾಗಿದೆ ಎಂದು ಸಚಿವರು ಒತ್ತಿ ಹೇಳಿದರು.ಸಭೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳು, ಸಮೀಕ್ಷಾರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿ ಕೊರತೆ, ಕೆಲವು ಪ್ರದೇಶಗಳಲ್ಲಿ ಜನರು ಸಮರ್ಪಕವಾಗಿ ಸಹಕರಿಸದಿರುವುದು ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಯಿತು. ತಾಂತ್ರಿಕ ತಂಡಗಳನ್ನು ಬಲಪಡಿಸಿ ಆ್ಯಪ್ ಸಮಸ್ಯೆ ಕೂಡಲೇ ಬಗೆಹರಿಸಲು ಮತ್ತು ಸಮೀಕ್ಷಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ಸಮೀಕ್ಷೆಯ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವಿವರಣೆ ನೀಡಿದರು. ಜಿಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕ್ಕರ ಮತ್ತು ತಹಸೀಲ್ದಾರ್ ಪ್ರಕಾಶ ಗಾಯಕವಾಡ ಸೇರಿದಂತೆ ಶಿಕ್ಷಣ ಮತ್ತು ಬಿಸಿಎಂ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಹಮ್ಮಿಕೊಂಡಿರುವ ಮಹಾಕಾಂಕ್ಷಿ ಯೋಜನೆಗೆ ಕೇಂದ್ರ ಸಚಿವರು ವಿನಾಕಾರಣ ವಿರೋಧ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮಾಡುವ ಜನಪರ ಕಾರ್ಯಕ್ಕೆ ಬೆಂಬಲಿಸಬೇಕು, ಕೇಂದ್ರ ಸರ್ಕಾರ ಮಾಡುವ ಜಾತಿ ಜನಗಣತಿಗೆ ಇವರು ಹೀಗೆಯೇ ವಿರೋಧ ಮಾಡುತ್ತಾರೆಯೇ? ಎಂದು ಪ್ರಶ್ನಿಸಿದ ಸಚಿವರು, ವಿರೋಧ ಮಾಡುವವರು ಜನಪರ ವಿರೋಧಿಗಳು ಎಂದು ಟೀಕಿಸಿದರು.