ಸಮೀಕ್ಷಾ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ: ಡಿಸಿ ನಾಗೇಂದ್ರ ಪ್ರಸಾದ್

| Published : Oct 05 2025, 01:01 AM IST

ಸಮೀಕ್ಷಾ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ: ಡಿಸಿ ನಾಗೇಂದ್ರ ಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ನಗರ, ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿ ಬಾಕಿ ಇರುವ ಮನೆಗಳ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು

ಬಳ್ಳಾರಿ: ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇನ್ನು ಮೂರು ದಿನ ಬಾಕಿ ಇದೆ. ನಗರ, ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿ ಬಾಕಿ ಇರುವ ಮನೆಗಳ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವೀಡಿಯೊ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು.

ಬಳ್ಳಾರಿ ನಗರ, ತಾಲೂಕು ವ್ಯಾಪ್ತಿಯಲ್ಲಿ ಪ್ರಗತಿಯಾಗಬೇಕಿದೆ. ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು. ಹೆಚ್ಚುವರಿ ಸಿಬ್ಬಂದಿ ಅಥವಾ ಈಗಾಗಲೇ ಪೂರ್ಣಗೊಳಿಸಿರುವ ಸಿಬ್ಬಂದಿ ಇದ್ದಲ್ಲಿ ನೇಮಿಸಿಕೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೆಸ್ಕಾಂ ಇಲಾಖೆಯ ಮೀಟರ್ ರೀಡರ್ ಗಳು ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಟ್ಟಡಗಳಿಗೂ ಯುಎಚ್‌ಐಡಿ ಸ್ಟೀಕರ್ ಅಂಟಿಸಿದ್ದು, ಇದರಿಂದ ಗಣತಿದಾರರಿಗೆ ಸಮೀಕ್ಷಾ ಕಾರ್ಯಕ್ಕೆ ತೊಂದರೆಯಾಗಿದೆ. ಹಾಗಾಗಿ ಮೀಟರ್ ರೀಡರ್ ಗಳು ಗಣತಿದಾರರಿಗೆ ಪೂರಕ ಮನೆಗಳನ್ನು ತೋರಿಸಲು ಹಾಗೂ ಅವರ ಜೊತೆ ತೆರಳುವಂತೆಯೂ ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಇದೇ ವೇಳೆ ತಾಲೂಕುವಾರು ನೇಮಿಸಿದ ನೋಡಲ್ ಅಧಿಕಾರಿಗಳಿಂದ ಆಯಾ ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿಯಿರುವ ಮನೆಗಳ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ, ಇರುವ ಕಾಲಾವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಸಹಾಯಕ ಆಯುಕ್ತ ಪಿ.ಪ್ರಮೋದ್, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಜೆಸ್ಕಾಂ ಅಧಿಕಾರಿಗಳು ಇದ್ದರು.