ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಹಾಗೂ ಅಮೃತ್ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
ಕನ್ನಡಪ್ರಭವಾರ್ತೆ ಮಧುಗಿರಿ
ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಹಾಗೂ ಅಮೃತ್ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಗತಿಯ ಕುರಿತು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಿಡಿಪಿ ವ್ಯಾಪ್ತಿಯಿಂದ ಹೊರಗುಳಿದಿದ್ದ ರೈತರ ಜಮೀನುಗಳನ್ನು ಯೋಜನೆಗೆ ಒಳಪಡಿಸುವ ಮೂಲಕ ಮಧುಗಿರಿ ನಗರದ ಸಮಗ್ರ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸಲಾಗುವುದು. ಅಮೃತ್ ಯೋಜನೆಯಡಿ ಬಾಕಿ ಉಳಿದ ವಾರ್ಡ್ ಗಳಲ್ಲಿ ಕೆಲಸಗಳನ್ನು ಮುಂದಿನ ಮೂರು ತಿಂಗಳೊಳಗೆ ಮುಗಿಸಲು ಗಡುವು ನೀಡಲಾಗಿದೆ. ಪಟ್ಟಣದ ಸುಮಾರು 60ಕ್ಕೂ ಹೆಚ್ಚು ಸರ್ವೆ ನಂಬರ್‌ಗಳನ್ನು ಸಿಡಿಪಿ ವ್ಯಾಪ್ತಿಗೆ ಸೇರಿಸುವ ಮೂಲಕ ರೈತರ ಹಲವು ವರ್ಷಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ವಿವರಿಸಿದರು. ಮುಂದಿನ ಎರಡು ದಶಕಗಳ ಕಾಲ ಮಧುಗಿರಿ ಪಟ್ಟಣ ಬೆಳೆಯುವ ರೀತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ರಾಜಣ್ಣ ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ನಗರ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ದೀಪ ಚೋಳನ್,ಎಸಿ ಗೊಟೂರು ಶಿವಪ್ಪ, ತಹಸಿಲ್ದಾರ್ ಶ್ರೀನಿವಾಸ್, ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್,ಎಂ.ಕೆ.ನಂಜುಂಡರಾಜು ನಗರ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.