ಆಗಸ್ಟ್ನಿಂದ ನವೆಂಬರ್ವರೆಗೆ ಕೆಲವು ಕಾಮಗಾರಿಗಳು ಆರಂಭವಾಗದಿರುವುದು ಗಂಭೀರ ವಿಚಾರವಾಗಿವೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಳಂಬ ಮಾಡಬಾರದು. ಮುಂದಿನ ಜನವರಿಯೊಳಗೆ ಎಲ್ಲ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ ಅಗತ್ಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ವಿವಿಧ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳಗೆ ವಿಳಂಬಕ್ಕೆ ಅವಕಾಶ ನೀಡದೆ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೂಚಿಸಿದರು.ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಜಿಪಂ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾಮಗಾರಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಸ್ಥಳ ಪರಿಶೀಲನೆ, ತಾಂತ್ರಿಕ ಅನುಮೋದನೆ, ಭೂಸ್ವಾನ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಆರಂಭಿಕ ಹಂತದಲ್ಲಿಯೇ ಪೂರ್ಣಗೊಳಿಸಿ, ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದರು.
ಆಗಸ್ಟ್ನಿಂದ ನವೆಂಬರ್ವರೆಗೆ ಕೆಲವು ಕಾಮಗಾರಿಗಳು ಆರಂಭವಾಗದಿರುವುದು ಗಂಭೀರ ವಿಚಾರವಾಗಿವೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಳಂಬ ಮಾಡಬಾರದು. ಮುಂದಿನ ಜನವರಿಯೊಳಗೆ ಎಲ್ಲ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ ಅಗತ್ಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.ಕಾಮಗಾರಿಗಳ ಆದ್ಯತೆಗಳನ್ನು ಆರಂಭದಲ್ಲಿಯೇ ಅಂತಿಮಗೊಳಿಸಬೇಕು. ಆರು ತಿಂಗಳಿಗೊಮ್ಮೆ ಆದ್ಯತೆ ಬದಲಾಯಿಸುವುದರಿಂದ ಅನುಷ್ಠಾನದಲ್ಲಿ ಗೊಂದಲ ಉಂಟಾಗುತ್ತದೆ. ಅನುಮೋದಿತ ಕಾಮಗಾರಿಗಳ ಒಪ್ಪಂದ ಹಾಗೂ ಸಾಮಗ್ರಿಗಳ ಖರೀದಿ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ ಕಾಮಗಾರಿಗಳ ಅನುಷ್ಠಾನಕ್ಕೆ ಸಿದ್ಧರಾಗಬೇಕು ಎಂದರು.
ಸರ್ಕಾರ ಹಾಗೂ ಜಿಪಂನಿಂದ ಬಿಡುಗಡೆಯಾಗುವ ಅನುದಾನವನ್ನು ಆರ್ಥಿಕ ವರ್ಷದ ಕೊನೆಯಲ್ಲಿ ತರಾತುರಿಯಿಂದ ವೆಚ್ಚ ಮಾಡುವ ಬದಲು, ನಿಗದಿತ ಉದ್ದೇಶಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನುದಾನ ವೆಚ್ಚ ಮಾಡುವುದಷ್ಟೇ ಅಭಿವೃದ್ಧಿಯ ಮಾನದಂಡವಲ್ಲ. ಕಾಮಗಾರಿಗಳ ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ದೊರೆಯುವ ನೈಜ ಪ್ರಯೋಜನ ಮುಖ್ಯವಾಗಬೇಕು. ಪ್ರತಿಯೊಬ್ಬ ಅಕಾರಿಯೂ ತಮ್ಮ ಇಲಾಖೆ ಜವಾಬ್ದಾರಿಯನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಪರಿಗಣಿಸಬೇಕು ಎಂದರು.ವಿದ್ಯಾರ್ಥಿನಿಲಯಗಳ ದುರಸ್ತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸಿರುವ ಅನುದಾನವನ್ನು ಸಕಾಲದಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವಸತಿ ಮತ್ತು ಕಲಿಕಾ ವಾತಾವರಣ ಕಲ್ಪಿಸಬೇಕು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುವಂತೆ ಕ್ರಮ ವಹಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ವಿವಿಧ ಇಲಾಖೆಗಳ ಕಾಮಗಾರಿಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರ ನೈಜ ಅಗತ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಒಂದೇ ಕಾಮಗಾರಿಗೆ ಎರಡು ಮೂಲಗಳಿಂದ ಅನುದಾನ ಬಳಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳ ಅಗತ್ಯತೆ, ಸ್ಥಳ ಲಭ್ಯತೆ ಹಾಗೂ ತಾಂತ್ರಿಕ ಅಂಶಗಳನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ವೇತನ, ಪಿಂಚಣಿ, ಗ್ರಾಚ್ಯುಟಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೆಚ್ಚ ಸೇರಿದಂತೆ ಬದ್ಧ ವೆಚ್ಚಗಳಿಗೆ ಅಗತ್ಯವಿರುವ ಅನುದಾನದ ಕುರಿತು ಪರಿಶೀಲಿಸಿ ಹೆಚ್ಚುವರಿ ಅನುದಾನದ ಪ್ರಸ್ತಾವನೆಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ. ಖರೀದಿ ಪ್ರಕ್ರಿಯೆ ಹಾಗೂ ನಾಗರಿಕ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಪಾರದರ್ಶಕವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದರು.
ಶಾಲೆಗಳ ಉಪಕರಣ ಮತ್ತು ಸಾಮಗ್ರಿಗಳ ಖರೀದಿ, ಅನುದಾನ ಬಳಕೆ ಹಾಗೂ ಕಾಮಗಾರಿಗಳ ಪ್ರಗತಿಯ ಕುರಿತು ಕ್ಷೇತ್ರ ಶಿಕ್ಷಣಾಕಾರಿಗಳು ವರದಿ ಸಲ್ಲಿಸಬೇಕು. ಅನುದಾನದ ಕೊರತೆಯಿಂದ ಅಪೂರ್ಣಗೊಂಡಿರುವ ಕಾಮಗಾರಿಗಳು ಹಾಗೂ ಹೆಚ್ಚುವರಿ ಅನುದಾನದ ಅಗತ್ಯವಿರುವ ಯೋಜನೆಗಳ ಪ್ರಸ್ತಾವನೆಗಳನ್ನು ಮುಂದಿನ ಆರ್ಥಿಕ ವರ್ಷದ ಬಜೆಟ್ನಲ್ಲಿ ಪರಿಗಣಿಸುವಂತೆ ರಾಜ್ಯಮಟ್ಟಕ್ಕೆ ಸಲ್ಲಿಸಲಾಗುವುದು ಎಂದರು.ಜಿಲ್ಲೆಯ ಹಾಲಿನ ಬ್ಯಾಂಕ್ ಕಾರ್ಯಾರಂಭಕ್ಕೆ ಅಗತ್ಯವಿರುವ ಬಹುತೇಕ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ, ಆಟೋಕ್ಲೇವ್ ಯಂತ್ರ, ಡೀಪ್ ಫ್ರೀಜರ್ ಸೇರಿದಂತೆ ಮೂರು ಪ್ರಮುಖ ಉಪಕರಣಗಳ ಕೊರತೆಯಿದ್ದು, ಅವುಗಳನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯ ಉಪಕರಣಗಳು ಲಭ್ಯವಾದಲ್ಲಿ ಹಾಲಿನ ಬ್ಯಾಂಕ್ ಸಂಪೂರ್ಣವಾಗಿ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ ಎಂದರು.
ಸಭೆಯಲ್ಲಿ ಜಿಪಂ ಯೋಜನಾಕೋಶದ ಅಕಾರಿ ಧನುಷ್, ಉಪ ಕಾರ್ಯದರ್ಶಿ (ದರ್ಜೆ-1) ಶಿವಲಿಂಗಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಕಾರಿಗಳು ಭಾಗವಹಿಸಿದ್ದರು.