ಕನ್ನಡಪ್ರಭವಾರ್ತೆ ಮಧುಗಿರಿ
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಎನ್.ರಾಜಣ್ಣ ತಾಕೀತು ಮಾಡಿದರು.ಬುಧವಾರ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಮಹತ್ವದ ಸಭೆಯನ್ನುದ್ದೇಶಿಸಿ ಮಾತನಾಡಿದರು.
ನಗರ ಸೇರಿದಂತೆ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರವಾಗಿ ಮಾಹಿತಿ ಪಡೆದುಕೊಳ್ಳಲಾಯಿತು. ವಿಶೇಷವಾಗಿ ವಿವಿಧ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ವೇಳೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ತಕ್ಷಣ ಪರಿಹಾರ ಕಲ್ಪಿಸಲಾಯಿತು. ಇದರಿಂದ ಸಾರ್ವಜನಿಕರು ಶಾಸಕರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧಿಕಾರಿಗಳು ಶ್ರೀಸಾಮಾನ್ಯರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಕಚೇರಿಗಳಿಗೆ ಅರ್ಜಿ ಹೊತ್ತು ಜನರು ಅಲೆಯಬಾರದು ಆ ನಿಟ್ಟಿನಲ್ಲಿ ಕೆಲಸ ಮಾಡಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣಕ್ಕೆ ಹೊಂದಿಕೊಂಡಿರುವ ಲಾಲಾಪೇಟೆ ಸಮೀಪದಲ್ಲಿ ವಿವಿಧ ಸಮುದಾಯಗಳ ವಿದ್ಯಾರ್ಥಿ ನಿಲಯ, ಸಮುದಾಯ ಭವನ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅಗತ್ಯವಾದ ಸ್ಥಳ ಪರಿಶೀಲನೆ ನಡೆಸಲಾಯಿತು. ಈ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಯಿತು.
ಸಭೆಯಲ್ಲಿ ತಹಸೀಲ್ದಾರ್ ಶ್ರೀನಿವಾಸ್, ಎ.ಡಿ ಧನಂಜಯ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಪಿಡಬ್ಲ್ಯುಡಿ ಇಇ ಹನುಮಂತರಾವ್, ಎಇಇ ಸಂಪತ್ ಕುಮಾರ್ , ಸಿಪಿಐ ಹನುಮಂತರಾಯಪ್ಪ, ಡಿವೈಎಸ್‌ಪಿ ಮಂಜುನಾಥ್ ಇತರರಿದ್ದರು.