ಸಾರಾಂಶ
ಶಾಲಾ, ಕಾಲೇಜು ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಸಿಬ್ಬಂದಿಯ ಬೇಡಿಕೆ ಈಡೇರಿಸಬೇಕು.
ಹೊಸಪೇಟೆ: ಶಾಲಾ, ಕಾಲೇಜು ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಸಿಬ್ಬಂದಿಯ ಬೇಡಿಕೆ ಈಡೇರಿಸಬೇಕು ಎಂದು ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಶಾಸಕ ಎಚ್.ಆರ್. ಗವಿಯಪ್ಪಗೆ ಮನವಿ ಸಲ್ಲಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಘದಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ಶಾಲಾ, ಕಾಲೇಜುಗಳ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್ ಗಳು ಯಾವುದೇ ಭದ್ರತೆ ಇಲ್ಲದೆ ಕೆಲಸ ಮಾಡುತ್ತಾ ಬಂದಿದ್ದಾರೆ. ಇವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.ಹಾಸ್ಟೆಲ್‌ಗಳ ಹೊರಗುತ್ತಿಗೆ ನೌಕರರಿಗೆ ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. 10 ವರ್ಷಗಳಿಂದ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಎಲ್ಲರನ್ನೂ ತರಬೇಕು. ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಪರಿಷ್ಕರಣಾ ಸಮಿತಿ ಸಭೆ ಸೇರಿ ತೀರ್ಮಾನ ಮಾಡಿ ಕನಿಷ್ಠ ವೇತನ ₹31 ಸಾವಿರ ಕೊಡಬೇಕು. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ ಕೊಡಬೇಕು. ಕೆಲಸದ ಸಮಯ ನಿಗದಿ ಆಗಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳ ತಕ್ಷಣ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಮರಡಿ ಜಂಬಯ್ಯ ನಾಯಕ, ಬಿಸಾಟಿ ತಾಯಪ್ಪ ನಾಯಕ, ಹನುಮಂತಪ್ಪ, ರಮೇಶ್, ಮಂಜುನಾಥ, ರೇಣುಕಮ್ಮ, ಪದ್ಮಾ ಮತ್ತಿತರರಿದ್ದರು.