ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಸುವ ಸಂಬಂಧ ಮಂಡಿಸಲುದ್ದೇಶಿಸಿರುವ ಮಲಯಾಳಂ ಭಾಷಾ ಮಸೂದೆ ಕುರಿತು ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಜತೆಗೆ, ಈ ವಿಧೇಯಕ ಜಾರಿಯಾದರೆ ಕರ್ನಾಟಕ ಹೋರಾಟ ನಡೆಸಲಿದೆ ಎಂದೂ ಎಚ್ಚರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಸುವ ಸಂಬಂಧ ಮಂಡಿಸಲುದ್ದೇಶಿಸಿರುವ ಮಲಯಾಳಂ ಭಾಷಾ ಮಸೂದೆ ಕುರಿತು ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಜತೆಗೆ, ಈ ವಿಧೇಯಕ ಜಾರಿಯಾದರೆ ಕರ್ನಾಟಕ ಹೋರಾಟ ನಡೆಸಲಿದೆ ಎಂದೂ ಎಚ್ಚರಿಸಿದ್ದಾರೆ.ಕೇರಳ ಸರ್ಕಾರ ಈ ಕಾಯ್ದೆ ಜಾರಿಗೆ ಮುನ್ನ ಭಾಷಾ ಅಲ್ಪಸಂಖ್ಯಾತ ಸಮುದಾಯಗಳು, ಶಿಕ್ಷಣ ತಜ್ಞರು ಮತ್ತು ನೆರೆಯ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು. ತನ್ನ ಪ್ರಸ್ತಾಪಿತ ಮಸೂದೆಯನ್ನು ಪುನರ್ ಪರಿಶೀಲನೆಗೆ ಒಡ್ಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಮಸೂದೆ ಅಂಗೀಕಾರಗೊಂಡರೆ, ಭಾಷಾ ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತ್ತು ನಮ್ಮ ಒಕ್ಕೂಟ ವ್ಯವಸ್ಥೆಯ ಬಹುತ್ವದ ಚಿಂತನೆಯನ್ನು ಕಾಪಾಡಲು ಕರ್ನಾಟಕ ಹೋರಾಡಲಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.ಕರ್ನಾಟಕ ಹಾಗೂ ಕೇರಳ ಎರಡು ರಾಜ್ಯಗಳು ಕೇವಲ ಭೌಗೋಳಿಕವಾಗಿ ಮಾತ್ರವಲ್ಲ, ಆಳವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಮಾನವೀಯ ಬಂಧಗಳಿಂದ ಬೆಸೆದುಕೊಂಡಿವೆ. ಹೀಗಿರುವಾಗ ಈ ಮಸೂದೆ ಮೂಲಕ ಕನ್ನಡ ಮಾಧ್ಯಮದ ಶಾಲೆಗಳಲ್ಲೂ, ವಿಶೇಷವಾಗಿ ಕಾಸರಗೋಡಿನಂತಹ ಗಡಿ ಜಿಲ್ಲೆಗಳಲ್ಲಿ ಮೊದಲ ಭಾಷೆಯನ್ನಾಗಿ ಮಲಯಾಳಿ ಕಲಿಕೆ ಕಡ್ಡಾಯಗೊಳಿಸುವುದು ಸರಿಯಲ್ಲ. ಕಾಸರಗೋಡಿನಂತಹ ಗಡಿ ಪ್ರದೇಶಗಳಲ್ಲಿ ಮಲಯಾಳಿ, ಕನ್ನಡ, ತುಳು, ಬ್ಯಾರಿ ಮತ್ತು ಇತರ ಭಾಷೆಗಳನ್ನಾಡುವ ಜನ ತಲೆಮಾರುಗಳಿಂದ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಹೀಗಿರುವಾಗ ಒಂದೇ ಭಾಷೆ ಕಡ್ಡಾಯಗೊಳಿಸುವ ಯಾವುದೇ ನೀತಿ ಮಕ್ಕಳ ಮೇಲೆ ಅನಗತ್ಯ ಹೊರೆ ಹಾಕುವ ಸಾಧ್ಯತೆಯಿದೆ. ಭಾಷಾ ಅಲ್ಪಸಂಖ್ಯಾತರು ನಡೆಸುವ ಶಿಕ್ಷಣ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತವೆ. ದೀರ್ಘಕಾಲಿನ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡುತ್ತವೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.