ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಏಕಾಗ್ರತೆಯಿಂದ ಓದಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿ

ಕನ್ನಡಪ್ರಭ ವಾರ್ತೆ ಮೈಸೂರು

ಇರುವುದು ಒಂದೇ ಬದುಕು ಅದನ್ನು ಸುಂದರವಾಗಿ ರೂಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಧ್ವನಿ ಫೌಂಡೇಶನ್ ಸಂಸ್ಥಾಪಕಿ, ಲೇಖಕಿ ಡಾ. ಶ್ವೇತಾ ಮಡಪ್ಪಾಡಿ ತಿಳಿಸಿದರು.

ಜೆ.ಪಿ. ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳಲ್ಲಿ ಸಂಸ್ಕಾರದ ಕೊರತೆ ಇರುವುದು ಹೆಚ್ಚು ಕಂಡು ಬರುತ್ತಿರುವುದು ನಿಜಕ್ಕೂ ಕಳವಳಕಾರಿ ಎಂದರು.

ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಏಕಾಗ್ರತೆಯಿಂದ ಓದಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಜೀವನದಲ್ಲಿ ಉನ್ನತ ಮಟ್ಟದಲ್ಲಿ ಕನಸು ಕಾಣಬೇಕು. ಮೊಬೈಲ್‌ ಗಳಿಗೆ ದಾಸರಾಗದೆ ಓದಿನತ್ತ ಗಮನ ಹರಿಸಿ. ಓದಿನ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದು ಹೇಳಿದರು.

ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಬಿ. ಹುಚನಗೊಂಡರ ಮಾತನಾಡಿ, ಕ್ರೀಡಾ ಚಟುವಟಿಕೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ. ಯಾವುದಾದರೂ ಕ್ರೀಡೆಯಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಾಗ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಉಪನ್ಯಾಸಕ ಎಸ್.ಎಂ. ಗುರುಪಾದಪ್ಪ ಮಾತನಾಡಿ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಹಾದಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಗುರುಗಳನ್ನು ಗೌರವಿಸಬೇಕು. ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ತಾವು ಓದಿದ ಕಾಲೇಜಿಗೂ, ಕಲಿಸಿಕೊಟ್ಟ ಗುರುಗಳಿಗೂ ಕೀರ್ತಿ ತರುವಂತೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ನಿರಂಜನ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸರ್ವಾಂಗೀಣವಾಗಿ ಬೆಳವಣಿಗೆ ಹೊಂದಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಆದರ್ಶ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವನ್ನು ಉಪನ್ಯಾಸಕಿ ಎಸ್. ಅಮೂಲ್ಯ ನಡೆಸಿಕೊಟ್ಟರು. ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಎಸ್. ಅಮೂಲ್ಯ, ಕ್ರೀಡಾ ವೇದಿಕೆ ಸಂಚಾಲಕ ಎಚ್.ಎನ್. ನಾಗರಾಜ ಇದ್ದರು. ಎಸ್.ಎಂ. ಚಂದ್ರಶೇಖರ ಸ್ವಾಗತಿಸಿದರು. ಪುಷ್ಪಾ ವಂದಿಸಿದರು. ಎನ್. ಶಕುಂತಳಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.