ಸಾರಾಂಶ
ಕನ್ನಡಪ್ರಭ ವಾರ್ತೆ ಬೀದರ್
ಅ.17ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿವರ್ಷದಂತೆ ಈ ವರ್ಷವು ಅದ್ಧೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂದು ಬೆಳಗ್ಗೆ 8.30ಗಂಟೆಗೆ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಿದ ನಂತರ 10.45ಕ್ಕೆ ಮಹರ್ಷಿ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚತೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳು ಇರುವಂತೆ ನೋಡಿಕೊಳ್ಳಬೇಕು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮಕ್ಕೆ ಬೀದರ್‌ನ ಹಿರಿಯ ಸಾಹಿತಿ ಡಾ.ರಾಮಚಂದ್ರ ಗಣಾಪೂರರನ್ನು ವಿಶೇಷ ಉಪನ್ಯಾಸಕರಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.ಈ ಸಭೆಯಲ್ಲಿ ಬೀದರ್ ಸಹಾಯಕ ಆಯುಕ್ತರಾದ ಮಹ್ಮದ್ ಶಕೀಲ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಮಾನಪ್ಪ, ಡಿವೈಎಸ್ಪಿ ಶಿವನಗೌಡ ಪಾಟೀಲ, ಎಮ್.ಎಸ್. ಕಟಗಿ, ಪಂಡಿತ ಚಿದ್ರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ, ಶಾರದಾ ಕಲ್ಮಲಕರ್, ನಂದಕುಮಾರ್, ಸಂತೋಷ ಜೋಳದಾಪ, ಮಾಳಪ್ಪಾ ಅಡಸಾರೆ, ಸುನೀಲ ಭಾವಿಕಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.