ಶ್ರೀಮಠದ ಆವರಣದಲ್ಲಿ ಶ್ರೀ ಶಿವಲಿಂಗ ಅಜ್ಜಯ್ಯನವರ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಬಗೆಯ ಹೂವುಗಳಿಂದ ಪಲ್ಲಕ್ಕಿಯನ್ನು ಅಲಂಕರಿಸಲಾಗಿದ್ದು, ಭಕ್ತರು ಭಕ್ತಿಪೂರ್ವಕವಾಗಿ ಪಲ್ಲಕ್ಕಿಯನ್ನು ಹೊತ್ತು ಸಾಗಿಸಿ ನಮಿಸಿದರು. ಕೋಡಿಮಠದ ಪೀಠಾಧಿಪತಿಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹಾಗೂ ವಿವಿಧ ಮಠಗಳ ಗುರುಗಳು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಹಾಗೂ ಶ್ರಾವಣ ಮಾಸದಲ್ಲಿ ನಡೆದ ಧಾರ್ಮಿಕ ಚಟುವಟಿಕೆಗಳ ಕುರಿತು ವಿವರಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠ ಮಹಾಸಂಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ನಡೆದ ವಿವಿಧ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಶನಿವಾರ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವದೊಂದಿಗೆ ಭಕ್ತಿಭಾವದ ಸಮಾರೋಪ ಕಂಡುಬಂದಿತು. ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡು ಶ್ರೀಮಠದ ಧಾರ್ಮಿಕ ಪರಂಪರೆಯ ವೈಭವಕ್ಕೆ ಸಾಕ್ಷಿಯಾದರು.ಶ್ರೀಮಠದ ಆವರಣದಲ್ಲಿ ಬೆಳಿಗ್ಗೆ ಪೂಜ್ಯ ಶ್ರೀ ಶಿವಲಿಂಗ ಅಜ್ಜಯ್ಯನವರ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಬಗೆಯ ಹೂವುಗಳಿಂದ ಪಲ್ಲಕ್ಕಿಯನ್ನು ಅಲಂಕರಿಸಲಾಗಿದ್ದು, ಭಕ್ತರು ಭಕ್ತಿಪೂರ್ವಕವಾಗಿ ಪಲ್ಲಕ್ಕಿಯನ್ನು ಹೊತ್ತು ಸಾಗಿಸಿ ನಮಿಸಿದರು. ಕೋಡಿಮಠದ ಪೀಠಾಧಿಪತಿಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹಾಗೂ ವಿವಿಧ ಮಠಗಳ ಗುರುಗಳು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಹಾಗೂ ಶ್ರಾವಣ ಮಾಸದಲ್ಲಿ ನಡೆದ ಧಾರ್ಮಿಕ ಚಟುವಟಿಕೆಗಳ ಕುರಿತು ವಿವರಿಸಿದರು.ಸಮಾರಂಭದಲ್ಲಿ ಆಶೀರ್ವಚನ ನೀಡಿದ ಸೊರಬದ ಜಡೆ ಸಂಸ್ಥಾನಮಠದ ಡಾ. ಮಹಾಂತ ಮಹಾಸ್ವಾಮಿಗಳು, ಕೋಡಿಮಠವು ಕೇವಲ ಧಾರ್ಮಿಕ ಕ್ಷೇತ್ರವಲ್ಲದೆ ಜ್ಞಾನ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಸಮಾಜಕ್ಕೆ ಪಸರಿಸುತ್ತಿರುವ ಪ್ರಮುಖ ಕೇಂದ್ರವಾಗಿದೆ ಎಂದು ಹೇಳಿದರು. ಕೋಡಿಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಭಕ್ತರಲ್ಲಿ ಸನ್ಮಾರ್ಗದ ಚಿಂತನೆ ಬೆಳೆಸುವ ಉದ್ದೇಶದಿಂದ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದಾರೆ. ಶ್ರೀಮಠದಿಂದ ಹೊರಹೊಮ್ಮುವ ಜ್ಞಾನವಾಣಿ ನಾಡಿನ ಜನರಿಗೆ ಮಾತ್ರವಲ್ಲದೆ ಜಗತ್ತಿನಾದ್ಯಂತ ಜ್ಞಾನ ಹಾಗೂ ಸನ್ಮಾರ್ಗದ ಸಂದೇಶವನ್ನು ನೀಡುವಂತಾಗಿದೆ ಎಂದು ಅಭಿಪ್ರಾಯಪಟ್ಟರು.ಬಸವವಾದಿ ಶರಣರ ಚಿಂತನೆ, ಸಮಾನತೆ, ಕಾಯಕ ಮತ್ತು ದಾಸೋಹದ ಮಹತ್ವದ ಕುರಿತು ಅವರು ಸುದೀರ್ಘವಾಗಿ ಆಶೀರ್ವಚನ ನೀಡಿದರು. ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ಕೋಡಿಮಠದಲ್ಲಿ ಲೋಕಕಲ್ಯಾಣಾರ್ಥವಾಗಿ ವಿವಿಧ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷ ಹೋಮ-ಹವನಗಳು, ಭಜನೆ, ಪ್ರವಚನ ಹಾಗೂ ಧಾರ್ಮಿಕ ಉಪನ್ಯಾಸಗಳು ನಡೆದವು.ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಶ್ರೀಮಠಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅಲ್ಲದೆ ದಾಸೋಹ ಸೇವೆಯಲ್ಲಿ ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸೊರಬದ ಪ್ರಗತಿಪರ ರೈತ ನಾಗರಾಜ ಗೌಡ ಅವರನ್ನು ಶ್ರೀಮಠದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಕೃಷಿ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.ಸಮಾರಂಭದಲ್ಲಿ ಚನ್ನಗಿರಿಯ ಹಾಲಸ್ವಾಮಿ ವಿರಕ್ತಮಠದ ಡಾ. ಬಸವಜಯಚಂದ್ರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶ್ರೀಮಠದ ಭಕ್ತರು, ಗಣ್ಯರು ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಭಕ್ತರಿಗೆ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು.