ಸಾರಾಂಶ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ವ್ಯಕ್ತಿಗಳ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ರೂಪಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ, ಬೀದರ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ವ್ಯಕ್ತಿಗಳ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ರೂಪಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕಿಶೋರ ರಾಕೇಶ್ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿ ದರು. ಸಂವಿಧಾನ ಮತ್ತು ನ್ಯಾಯಾಂಗದ ವಿರುದ್ಧ ಧಿಕ್ಕಾರ ವ್ಯಕ್ತಪಡಿಸುವವರನ್ನು ರಾಷ್ಟ್ರದ್ರೋಹಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ನ್ಯಾಯವಾದಿ ಬಾಬುರಾವ್ ಹೊನ್ನಾ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಆರ್‌ಪಿಐ (ಅಂಬೇಡ್ಕರ್) ರಾಜ್ಯಾಧ್ಯಕ್ಷ ಮಹೇಶ ಗೋರನಾಳಕರ್, ಪೀಪಲ್ಸ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಮುಬಶೀರ ಶಿಂಧೆ, ಅರುಣ ಪಟೇಲ್, ವಹೀದ್ ಲಖನ್, ಡಾ. ಕಾಶಿನಾಥ ಚೆಲ್ವಾ, ಶಿವರಾಜ ತಡಪಳ್ಳಿ, ಪ್ರಕಾಶ ರಾವಣ, ರಾಜಪ್ಪಾ ಗೂನ್ನಳ್ಳಿಕರ್, ಮಾಣಿಕ ಖಾನಾಪೂರೆ, ವಿನೋದ ಬಂದಗೆ ಹಾಗೂ ಅನೇಕ ಮಹಿಳೆಯರು, ಯುವಕರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.