ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಜನಸಾಮಾನ್ಯರಿಗೆ ಎದುರಾಗಿರುವ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಜನಸಾಮಾನ್ಯರಿಗೆ ಎದುರಾಗಿರುವ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ನಗರದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಮಾತನಾಡಿ, ಸಾರಿಗೆ ನಿಗಮ ಬಸ್ ಟಿಕೆಟ್ ದರದಲ್ಲಿ ಶೇ.15ರಷ್ಟು ದರ ಹೆಚ್ಚಳ ಮಾಡಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್ ದರದ ಬಿಸಿ ತಟ್ಟಿದ್ದು, ಎಲ್ಲೆಡೆ ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಬಸ್ ಟಿಕೆಟ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದರು.ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಪ್ರಿಯಾಂಕ ಖರ್ಗೆ ಆಪ್ತ ರಾಜು ಕುಪನೂರ ಸೋಲಾಪುರದ ಸುಪಾರಿ ಹಂತಕರನ್ನು ಕರೆತಂದು ನಮ್ಮ ಪಕ್ಷದ ಮುಖಂಡರು ಹಾಗೂ ಓರ್ವ ಸ್ವಾಮೀಜಿಯವರ ಹತ್ಯೆಗೆ ಸಂಚು ರೂಪಿಸಿರುವುದು ಕೂಡ ಬಹಿರಂಗವಾಗಿದೆ. ಆದರೂ, ಸಚಿವರು ನನ್ನ ಹೆಸರು ಡೆತ್ ನೋಟ್‌ನಲ್ಲಿ ಇಲ್ಲ ಎಂದು ವಾದಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್ ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆ ಇಲ್ಲವೇ ಇಲ್ಲ. ಹಾಗಾಗಿ ಪ್ರಕರಣದ ಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಕಾಸುಗೌಡ ಬಿರಾದಾರ, ಉಮೇಶ ಕಾರಜೋಳ, ಗೋಪಾಲ ಘಟಕಾಂಬಳೆ, ಉಮೇಶ ಕೊಳಕೂರ, ಶಂಕರ ಹೂಗಾರ, ಮಳುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ರಾಜು ಮಗಿಮಠ, ರಾಹುಲ ಜಾಧವ, ವಿಜಯ ಜೋಶಿ, ಶೀಲವಂತ ಉಮರಾಣಿ, ಪಾಪೂಸಿಂಗ ರಜಪೂತ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.----------------