ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಮಾಡಿದ್ದನ್ನು ವಿರೋಧಿಸಿ ಯಂಗ್ ಡೆಮಾಕ್ರಾಟ್ಸ್ ಹಾಸನ ಜಿಲ್ಲಾ ಘಟಕದ ವತಿಯಿಂದ ಶನಿವಾರ ನಗರದ ಹೇಮಾವತಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕನ್ನಡಪ್ರಭ ವಾರ್ತೆ ಹಾಸನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಮಾಡಿದ್ದನ್ನು ವಿರೋಧಿಸಿ ಯಂಗ್ ಡೆಮಾಕ್ರಾಟ್ಸ್ ಹಾಸನ ಜಿಲ್ಲಾ ಘಟಕದ ವತಿಯಿಂದ ಶನಿವಾರ ನಗರದ ಹೇಮಾವತಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.ಪ್ರತಿಭಟನೆಯ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಶಾಬಜ್ ಖಾನ್, ತಮ್ಮ ಸಂವಿಧಾನಬದ್ಧ ಹಕ್ಕಿನಡಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವ ಬದಲು ಅವರನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಕಪ್ಪುಚುಕ್ಕೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಗಂಭೀರ ಪ್ರಕರಣವಾಗಿದೆ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ವರ್ಷಗಳ ಕಾಲ ಶ್ರಮಿಸಿದ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ತೀವ್ರ ಆತಂಕ ಮತ್ತು ನೋವು ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟವನ್ನು ಧಮನಿಸಲು ಕೇಂದ್ರ ಸರ್ಕಾರ ಅನುಸರಿಸಿರುವ ಕ್ರಮಗಳು ಖಂಡನೀಯವಾಗಿದ್ದು, ಈ ಘಟನೆಯ ನೈತಿಕ ಹಾಗೂ ಆಡಳಿತಾತ್ಮಕ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊತ್ತು ದೇಶದ ಜನತೆಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕೆಲವು ವಿಡಿಯೋಗಳು ಹಾಗೂ ಛಾಯಾಚಿತ್ರಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸದ ಕೆಲ ವ್ಯಕ್ತಿಗಳು ಕೈಯಲ್ಲಿ ಲಾಠಿ ಹಿಡಿದು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಆ ವ್ಯಕ್ತಿಗಳು ಯಾರು, ಅವರಿಗೆ ಅಧಿಕಾರ ನೀಡಿದವರು ಯಾರು ಹಾಗೂ ಯಾವ ಕಾನೂನಿನ ಅಡಿಯಲ್ಲಿ ಅವರು ಕಾರ್ಯನಿರ್ವಹಿಸಿದರು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಆಡಳಿತ ತಕ್ಷಣ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.ಈ ಘಟನೆಯ ಕುರಿತು ಸಂಪೂರ್ಣ ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಿ, ಲಾಠಿಚಾರ್ಜ್‌ಗೆ ಕಾರಣರಾದ ಅಧಿಕಾರಿಗಳು ಹಾಗೂ ಕಾನೂನುಬಾಹಿರವಾಗಿ ಬಲಪ್ರಯೋಗ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಹೊಣೆ ಸರ್ಕಾರದ ಮೇಲಿದೆ ಎಂದು ಅವರು ಹೇಳಿದರು. ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಶಿಕ್ಷಣ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಬೇಕು. ಒಂದು ವೇಳೆ ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ನಿರ್ಲಕ್ಷಿಸಿ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ವ್ಯಾಪಕ ಮತ್ತು ತೀವ್ರ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸಂಘಟಿಸಲಾಗುವುದು. ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗಾಗಿ ಯಾವುದೇ ಮಟ್ಟದ ಹೋರಾಟಕ್ಕೂ ಯಂಗ್ ಡೆಮಾಕ್ರಾಟ್ಸ್ ಸಿದ್ಧವಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಯಂಗ್ ಡೆಮಾಕ್ರಾಟ್ಸ್ ಸಂಘಟನೆಯ ತಾಹೇರ್, ಆಶ್ಚಯಿನ್ ಸೇರಿದಂತೆ ಯಂಗ್ ಡೆಮಾಕ್ರಾಟ್ಸ್‌ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.