ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ವಿ.ಜೆ.ಶೋಭರಾಣಿ ಅವರಿಗೆ ದೂರು.
ಕನ್ನಡಪ್ರಭ ವಾರ್ತೆ ಮಂಡ್ಯ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ವಿ.ಜೆ.ಶೋಭರಾಣಿ ಅವರಿಗೆ ದೂರು ಸಲ್ಲಿಸಿದರು.ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು, ಸಚಿವ ಯತೀಂದ್ರ ವಿರುದ್ಧ ದೂರು ಸಲ್ಲಿಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಚಿವ ಯತೀಂದ್ರ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ಸಾರ್ವಜನಿಕವಾಗಿ ಸಾವಿರ ಹೆಡೆಯ ವಿಷ ಸರ್ಪ ಎಂಬ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಾಧ್ಯಮಗಳು/ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಬಂದಿದೆ ಎಂದರು.ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಕುರಿತು ಇಂತಹ ಹೇಳಿಕೆ ನೀಡಿರುವುದು ಸಂಘಟನೆ ಗೌರವಕ್ಕೆ ಧಕ್ಕೆ ತರುವ ಜೊತೆಗೆ, ಅದರೊಂದಿಗೆ ಗುರುತಿಸಿಕೊಂಡಿರುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಆಕ್ರೋಶ ಉಂಟು ಮತ್ತು ಸಾರ್ವಜನಿಕ ಶಾಂತಿಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ದೂರಿದರು.
ಈ ಹೇಳಿಕೆಯ ಮೂಲ ವಿಡಿಯೋ, ಸಂಪೂರ್ಣ ಸಂದರ್ಭ, ಹೇಳಿಕೆಯ ಉದ್ದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅದರ ಪ್ರಸಾರವನ್ನು ಪರಿಶೀಲಿ, ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ವಿಶೇಷವಾಗಿ ತನಿಖೆ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್), 2023ರ ಸೆಕ್ಷನ್ 196, ಸೆಕ್ಷನ್ 353 ಅನ್ವಯವಾಗುವ ಇತರ ಸಂಬಂಧಿತ ಕಾನೂನುಗಳ ಅಡಿ ಅಪರಾಧದ ಅಂಶಗಳು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಮೂಲ ವಿಡಿಯೋ ಮತ್ತು ಇತರೆ ಸಾಕ್ಷಿಗಳನ್ನು ಸಂಗ್ರಹಿಸಿ ಪರಿಶೀಲಿಸಿ ಹೇಳಿಕೆ ಸಂಪೂರ್ಣ ಸಂದರ್ಭ ಹಾಗೂ ಉದ್ದೇಶದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಅಂಶಗಳಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.ಬಿಎಸ್‌ಎಸ್ ಸೆಕ್ಷನ್ 196, 353 ಸೇರಿದಂತೆ ತನಿಖೆಯಲ್ಲಿ ಅನ್ವಯವಾಗುವ ಇತರೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ದೂರು ಕುರಿತು ಕೈಗೊಂಡ ಕ್ರಮದ ಮಾಹಿತಿಯನ್ನು ದೂರುದಾರರಿಗೆ ನೀಡಬೇಕು. ಈ ದೂರನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಕಾನೂನು ಪ್ರಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಪುಟ್ಟರಾಜು, ಚಂದ್ರು, ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಧನಂಜಯ, ಆನಂದ್, ಪ್ರಸನ್ನಕುಮಾರ್, ನಿತ್ಯಾನಂದ, ವೈರಮುಡಿ, ಶಿವಲಿಂಗಯ್ಯ, ಯಲ್ಲೇಗೌಡ ಸೇರಿದಂತೆ ಹಲವರು ಇದ್ದರು.