ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮುಂದೆ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡುತ್ತಿದ್ದರೆ ರಾಹುಲ್ ಗಾಂಧಿ ವಿದೇಶದಲ್ಲಿ ದೇಶದ ಘನತೆ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದಾರೆ.
ಹುಬ್ಬಳ್ಳಿ:
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಬುಧವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ. ಇವರು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಮೀಸಲಾತಿ ಹೇಳಿಕೆ ಹಿಂಪಡೆದು ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ದೇಶಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಹುಲ್ ಗಾಂಧಿ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿರುವುದು ಇದು ಮೊದಲಲ್ಲ. ಅವರು ಮತಿ ಭ್ರಮಣೆಯಾದವರಂತೆ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮುಂದೆ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡುತ್ತಿದ್ದರೆ ರಾಹುಲ್ ಗಾಂಧಿ ವಿದೇಶದಲ್ಲಿ ದೇಶದ ಘನತೆ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮೀಸಲಾತಿ ರದ್ದುಪಡಿಸುವ ಕುರಿತಾಗಿ ನೀಡಿರುವ ಹೇಳಿಕೆ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ ಎಂದರು.ಬಿಜೆಪಿ ಎಂದಿಗೂ ಮೀಸಲಾತಿ ವಿರೋಧಿ ಹೇಳಿಕೆ ನೀಡಿಲ್ಲ ಎಂದ ಟೆಂಗಿನಕಾಯಿ, ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಸಂವಿಧಾನ ಬದಲಿಸುವ ಹೇಳಿಕೆ ವೈಯಕ್ತಿಕ ಹೇಳಿಕೆಯಾಗಿದೆ. ಒಂದು ವೇಳೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ವೈಯಕ್ತಿಕ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಕಾಂಗ್ರೆಸ್‌ನವರಿಗೆ ಸಲ್ಲುತ್ತದೆ. ಸಂವಿಧಾನ ರಚನಕಾರರನ್ನು ಅವಮಾನ ಮಾಡಿದರು. ಆದರೆ, ನರೇಂದ್ರ ಮೋದಿ ಅಂಬೇಡ್ಕರ್ ಅವರ ಪ್ರಮುಖ ಸ್ಥಳಗಳನ್ನು ಅಭಿವೃದ್ಧಿಗೊಳಿಸಿ ದೇಶಕ್ಕೆ ತಿಳಿಸುವ ಕೆಲಸ ಮಾಡಿದ್ದಾರೆ ಎಂದರು.ಡಾ. ಕ್ರಾಂತಿಕಿರಣ ಮಾತನಾಡಿ, ದಲಿತರ ಮೀಸಲಾತಿ ಕುರಿತಾದ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತದೆ. ಇಲ್ಲಿಯ ವರೆಗೂ ದಲಿತರನ್ನು ಚುನಾವಣೆಗೆ ಮತ ಬ್ಯಾಂಕ್ ಸೃಷ್ಟಿಸಿಕೊಂಡಿದ್ದಾರೆ ವಿನಃ ಇವರಿಂದ ದಲಿತರಿಗೆ ಯಾವ ಸೌಲಭ್ಯಗಳು ಕೂಡ ದೊರೆತಿಲ್ಲ ಎಂದರು.
ಈ ವೇಳೆ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮುಖಂಡರಾದ ಬಸವರಾಜ ಅಮ್ಮಿನಬಾವಿ, ದತ್ತಮೂರ್ತಿ ಕುಲಕರ್ಣಿ, ಮಹೇಂದ್ರ ಕೌತಾಳ, ಪ್ರಭು ನವಲಗುಂದಮಠ, ಶಿವು ಮೆಣಸಿನಕಾಯಿ, ಪ್ರಕಾಶ ಕ್ಯಾರಕಟ್ಟಿ ಸೇರಿದಂತೆ ಹಲವರಿದ್ದರು.