ದೊಡ್ಡಬಳ್ಳಾಪುರ: ರಾಜ್ಯ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಮೊಮ್ಮಗ ಸೂರಜ್ ಹೆಗಡೆ ಅವರ ಅಕಾಲಿಕ ನಿಧನಕ್ಕೆ ಬೆಂ.ಗ್ರಾ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಂತಾಪ ವ್ಯಕ್ತಪಡಿಸಿದೆ.
ಬುಧವಾರ ಜಿಲ್ಲಾಡಳಿತ ಭವನದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಕಛೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸೂರಜ್ ಹೆಗಡೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಸೂರಜ್ ಹೆಗಡೆ ಅವರು ಅತ್ಯಂತ ಸರಳ ಹಾಗೂ ಸಜ್ಜನ ರಾಜಕಾರಣಿಯಾಗಿದ್ದರು. ದೇವರಾಜ ಅರಸು ಅವರ ರಾಜಕೀಯ ತತ್ವಗಳನ್ನು ಅಳವಡಿಸಿಕೊಂಡಿದ್ದ ಅವರ ಪಕ್ಷ ನಿಷ್ಠೆ ಹಾಗೂ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಪಕ್ಷಕ್ಕೆ, ರಾಜ್ಯಕ್ಕೆ ತುಂಬಲಾರದ ನಷ್ಟ. ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು,
ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಸ್ಮರಿಸಿದರು.ಈ ಸಂಧರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾರಾಯಣಸ್ವಾಮಿ, ಅಬ್ದುಲ್ ಬಶೀರ್, ತಾಲೂಕು ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.10ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯಲ್ಲಿ ಸೂರಜ್ ಹೆಗಡೆ ನುಡಿನಮನ ಕಾರ್ಯಕ್ರಮ ನಡೆಯಿತು.