ಹುಬ್ಬಳ್ಳಿ:
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಧಾರವಾಡ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ನಡೆಸುವಂತೆ ಮನವಿ ಮಾಡಲಾಗಿದೆ. ಸರ್ಕಾರ ಈ ಕುರಿತು ಕ್ರಮಕೈಗೊಳ್ಳದಿದ್ದರೆ ಧಾರವಾಡ ಹಾಗೂ ಗದಗ ಜಿಲ್ಲೆಯ ಶಾಸಕರು ಒಗ್ಗೂಡಿ ಸ್ವಂತ ಪ್ರಯತ್ನದಿಂದ ಮೋಡ ಬಿತ್ತನೆ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು. ಮೋಡ ಬಿತ್ತನೆಗೆ ಬಳಸುವ ವಿಮಾನ ಒಂದು ತಿಂಗಳ ಕಾಲ ಈ ಭಾಗದಲ್ಲೇ ಲಭ್ಯವಿರುವುದರಿಂದ ಅಗತ್ಯವಿದ್ದರೆ ಅದರ ಪ್ರಯೋಜನ ಪಡೆಯಲು ಸಿದ್ಧರಾಗಿದ್ದೇವೆ ಎಂದರು.
ಮಳೆ ಇಲ್ಲದೆ ಬಿತ್ತಿದ ಬೆಳೆ ಒಣಗಿದ್ದು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೂ ಸಹ ಅಗತ್ಯ ನೆರವು ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದು ಹೇಳಿದರು.ಈ ಹಿಂದೆ ಹಲವು ಬಾರಿ ಮೋಡ ಬಿತ್ತನೆ:
ಉತ್ತರ ಕರ್ನಾಟಕ ಭಾಗದಲ್ಲಿ ಈ ಹಿಂದೆಯೂ ಹಲವು ಬಾರಿ ಮೋಡ ಬಿತ್ತನೆ ಮಾಡಲಾಗಿದೆ. 2001, 2003, 2017, 2019, 2023ರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಭಾಗದಲ್ಲಿ ಮೋಡ ಬಿತ್ತನೆ ಮಾಡಿದಾಗ ಉತ್ತಮ ಮಳೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲಾಗುತ್ತಿದೆ.