ಸಾರಾಂಶ
ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಸ್ಪರ್ಧಾತ್ಮಕ ಪರೀಕ್ಷೆಗಳು ಜ. 19 ಹಾಗೂ ಜ. 25ರಂದು ನಗರದ ಮೂರು ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಗ್ರೂಪ್ ''ಬಿ'' ವೃಂದದ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.ಸಿಸಿ ಕ್ಯಾಮೆರಾ ಕಡ್ಡಾಯ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ, ಜಾಮರ್ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು ಈ ಕುರಿತಂತೆ ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ಸೂಚನೆ ನೀಡಿದರು.ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲೇ ಪ್ರಶ್ನೆಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು.ಎರಡು ದಿನ ಪರೀಕ್ಷೆ:ಜ. 19ರಂದು ಬೆಳಗ್ಗೆ 10ರಿಂದ 11.30ರ ವರೆಗೆ ಜರುಗುವ ಪರೀಕ್ಷೆಗೆ 1,540 ಅಭ್ಯರ್ಥಿಗಳು ಹಾಗೂ ಜ. 25ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆ ವರೆಗೆ ಜರುಗುವ ಪರೀಕ್ಷೆಗೆ 1,496 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.ವಸ್ತ್ರ ಸಂಹಿತೆ:ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್, ಟಿ ಶರ್ಟ್, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ. ಸರಳ ಚಪ್ಪಲಿ ಧರಿಸಬೇಕು.ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೂಲ ಪರೀಕ್ಷಾ ಪ್ರವೇಶ ಪತ್ರ ಹಾಗೂ ಐಡಿ ಕಾರ್ಡ್ ತರಬೇಕು. ಪರೀಕ್ಷಾ ಸಮಯಕ್ಕಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿರಬೇಕು. ಅಂದರೆ ಪರೀಕ್ಷೆ 10 ಗಂಟೆಗೆ ಇದ್ದರೆ ಬೆಳಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಿರಬೇಕು.ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.ಪರೀಕ್ಷಾ ಕೇಂದ್ರಗಳು: ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು, ಇಜಾರಿಲಕಮಾಪುರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
;Resize=(128,128))
;Resize=(128,128))