ಸಾರಾಂಶ
ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಿ
ಕಾರವಾರ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆ ಕುರಿತಂತೆ ಜಿಲ್ಲೆಯಾದ್ಯಂತ ವ್ಯಾಪಕ ತಪಾಸಣೆಗಳನ್ನು ಕೈಗೊಳ್ಳುವ ಮೂಲಕ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬರದಂತೆ ಎಚ್ಚರ ವಹಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ಹಾಗು ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಕುರಿತಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡ ತಂಡದ ಮೂಲಕ ನಿಯಮಿತವಾಗಿ ತಪಾಸಣೆ ನಡೆಸುವ ಮೂಲಕ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಿ ಎಂದರು.ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿ ಕೊಳ್ಳುವುದು ಅಪರಾಧವಾಗಿದ್ದು, ಹೋಟೆಲ್, ಗ್ಯಾರೇಜ್, ಕಟ್ಟಡ ನಿರ್ಮಾಣ, ಬೇಕರಿಗಳಲ್ಲಿ ಹೆಚ್ಚಿನ ತಪಾಸಣೆಗಳನ್ನು ನಡೆಸಬೇಕು. ಇಂತಹ ಸ್ಥಳದಲ್ಲಿ ಮಕ್ಕಳು ಕೆಲಸದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದರು.14 ವರ್ಷದೊಳಗಿನ ಬಾಲಕಾರ್ಮಿಕ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಮಾಲೀಕರ ಮೇಲೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬೆಕು. ಸಾರ್ವಜನಿಕರು ಯಾವುದೇ ಮಗು ಕೆಲಸದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098 ಹಾಗೂ 112 ಸಂಖ್ಯೆ ಕರೆ ಮಾಡಿ ಮಾಹಿತಿ ನಿಡಬೇಕು. ಕಾರ್ಮಿಕ ಇಲಾಖೆ ಮೂಲಕ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಜಿಲ್ಲೆಯಾದ್ಯಂತ ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಾಗೂ ಅವರ ಪೋಷಕರ ಹೆಸರು, ವಿಳಾಸವನ್ನು ಹಾಗೂ ಅವರು ಮರಳಿ ಶಾಲೆಗೆ ಹೋಗುತ್ತಿರುವ ಬಗೆಗಿನ ಮಾಹಿತಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆ ಕುರಿತಂತೆ 567 ತಪಾಸಣೆಗಳನ್ನು ಕೈಗೊಂಡಿದ್ದು, ಒಟ್ಟು 3 ಪ್ರಕರಣಗಳಲ್ಲಿ 2 ಬಾಲ ಕಾರ್ಮಿಕರು ಮತ್ತು 3 ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿದ್ದು ಸಂಬಂಧಪಟ್ಟ ಸಂಸ್ಥೆಗಳ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ತಿಳಿಸಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ. ಎಂ, ಡಿವೈಎಸ್‌ಪಿ ಗಿರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಾಲ್ ಐಗಳ್ ಇದ್ದರು.