ಸಾರಾಂಶ
ಹಾವೇರಿ: ಜಿಲ್ಲೆಯಲ್ಲಿ ಈ ಸಾಲಿನ ನೀಟ್ ಪರೀಕ್ಷೆಯನ್ನು ಪಾರದರ್ಶಕ, ವ್ಯವಸ್ಥಿತವಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ತಿಳಿಸಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2352 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈಗಾಗಲೇ ತಯಾರಿ ಮಾಡಿಕೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಲ್ ಟಿಕೆಟ್, ಐಡಿ ಕಾರ್ಡ್, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹೊರತುಪಡಿಸಿ ಬೇರೆ ಯಾವುದೇ ಪರಿಕರಗಳನ್ನು ತೆಗೆದುಕೊಂಡು ಬರುವಂತಿಲ್ಲ.
ಪರೀಕ್ಷೆಗೆ ಅವಶ್ಯಕವಿರುವ ಎಲ್ಲ ಪರಿಕರಗಳನ್ನು ಪರೀಕ್ಷಾ ಕೇಂದ್ರದಲ್ಲಿಯೆ ನೀಡಲಾಗುವುದು. ಪರೀಕ್ಷೆಗಳು ನಡೆಯುವ 5 ಕೇಂದ್ರಗಳಲ್ಲೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಕೊಠಡಿಗಳ ನಿರ್ವಹಣೆ, ಅಗತ್ಯ ಬೆಳಕಿನ ವ್ಯವಸ್ಥೆಗಾಗಿ ವಿದ್ಯುತ್ ದೀಪ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಮಾಡಲಾಗಿದೆ ಎಂದರು.ಕೇಂದ್ರಿಯ ವಿದ್ಯಾಲಯ ಪ್ರಾಂಶುಪಾಲ ಪಿ.ಎಸ್. ರಾಜು ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.ನೀಟ್ ಪರೀಕ್ಷೆ: ಸಹಾಯವಾಣಿ ಆರಂಭಹಾವೇರಿ: ನಗರದಲ್ಲಿ ಮೇ 4ರಂದು ನೀಟ್ ಪರೀಕ್ಷೆಗಳು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆಗಳನ್ನು ಸುಗಮವಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಹಾಗೂ ಸಮಸ್ಯೆಗಳ ನಿವಾರಣೆಗಾಗಿ ಸಹಾಯವಾಣಿ ಕೇಂದ್ರ ಆರಂಭಿಸಿದೆ .ಪರೀಕ್ಷಾ ಅಭ್ಯರ್ಥಿಗಳು ತಮ್ಮ ಅನುಕೂಲಗಳಿಗಾಗಿ ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್ ಮೊ. 9945060295 ಮತ್ತು ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲ ಪಿ.ಎಸ್. ರಾಜು ಅವರ ಮೊ. 8885652459 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೀಟ್ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆಹಾವೇರಿ: ನೀಟ್ ಪರೀಕ್ಷೆಯು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವಿವರ: ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಗಾಂಧಿಪುರ ಸರ್ಕಾರಿ ಪದವಿ ಕಾಲೇಜು, ಬಾಲಕಿಯರ ಸರ್ಕಾರಿ ಪಪೂ ಕಾಲೇಜು, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸೆಂಟ್ ಆನ್ಸ್ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ.