ಹಾವೇರಿ: ಜಿಲ್ಲೆಯಲ್ಲಿ 2026ನೇ ಸಾಲಿನ ನೀಟ್ ಪರೀಕ್ಷೆ ಜೂ.21ರಂದು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲರೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.ನೀಟ್ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ವ್ಕಾಡ್‌ಗಳು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದು ನಿರ್ದೇಶನ ನೀಡಿದರು.ಸಿಸಿ ಟಿವಿ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿಶೇಷಚೇತನ ವಿದ್ಯಾರ್ಥಿಗಳಿಗೆ ನೆಲಮಹಡಿಯಲ್ಲಿ ವ್ಯವಸ್ಥೆ ಮಾಡಬೇಕು ಎಂದರು.ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು. ಪರೀಕ್ಷೆ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಸಾರಿಗೆ ವ್ಯವಸ್ಥೆ: ಪರೀಕ್ಷಾ ದಿನದಂದು ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ತಲುಪಲು ಪರೀಕ್ಷಾ ಕೇಂದ್ರಗಳಿಗೆ ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವೈದ್ಯಕೀಯ ವ್ಯವಸ್ಥೆ: ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನಿಯೋಜನೆ ಮಾಡಬೇಕು ಹಾಗೂ ಬೇಸಿಗೆ ಕಾಲವಾದ್ದರಿಂದ ತುರ್ತು ಸಂದರ್ಭಕ್ಕೆ ಬೇಕಾದ ಓಆರ್‌ಎಸ್ ಹಾಗೂ ಇತರೆ ಔಷಧಿಗಳು ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬಂದೋಬಸ್ತ್ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಅವರು ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ ಶಾಂತಯುತವಾಗಿ ನಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಉಪಯೋಗಿಸುವ ಕೊಠಡಿಗಳನ್ನು ಹೊರತುಪಡಿಸಿ ಹೆಚ್ಚುವರಿ ಕೊಠಡಿಗಳಿಗೆ ಬೀಗಹಾಕಬೇಕು ಎಂದು ಸಲಹೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ಮಾತನಾಡಿ, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮೊದಲು ಅವರ ತಪಾಸಣೆ ನಡೆಸಬೇಕು ಎಂದರು. ಕೇಂದ್ರಿಯ ವಿದ್ಯಾಲಯ ಪ್ರಾಂಶುಪಾಲ ಪಿ.ಎಸ್. ರಾಜು ಮಾತನಾಡಿ, ಜಿಲ್ಲೆಯಲ್ಲಿ 2,532 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈಗಾಗಲೇ ಪರೀಕ್ಷಾ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಲ್ಜಿತ್ ಕುಮಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಇದ್ದರು. ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ: ನಿಗದಿಪಡಿಸಿದ ವಸ್ತ್ರ ಸಂಹಿತೆ(ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ(ಮಂಗಳಸೂತ್ರ ಹೊರತುಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ತಿಳಿಸಿದರು. ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ:ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಪಾರದರ್ಶಕ, ವ್ಯವಸ್ಥಿತವಾಗಿ ನೀಟ್ ಪರೀಕ್ಷೆ ನಡೆಸಿ-ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.