ಹಾವೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಮಾರ್ಚ್ 1ರಂದು ಜಿಲ್ಲೆಯ 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪದೋಷವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವರೆಗೆ ಜಿಲ್ಲೆಯಲ್ಲಿ ಎಲ್ಲ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಮಾಡಲಾಗಿದೆ. ಜಿಲ್ಲೆಗೆ ಕಪ್ಪು ಚುಕ್ಕೆಬರದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.

12 ತಂಡ ರಚನೆ:ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿಯ 12 ತಂಡಗಳನ್ನು ನೇಮಕ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.


ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಸರಿಯಾಗಿ ಮಾಡಬೇಕು. ಪರೀಕ್ಷೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆ 9ಕ್ಕೆ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಮಾರ್ಗಸೂಚಿ ಅನ್ವಯ ಓಎಂಆರ್ ಸೀಟ್‌ನಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಕೊಠಡಿ ಮೇಲ್ವಿಚಾರಕರೇ ಬರೆಯಬೇಕು ಎಂದರು.

ಬಂದೋಬಸ್ತ್:

ಪರೀಕ್ಷೆ ನಡೆಯುವ 39 ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲು ಹಾಗೂ ಓರ್ವ ಶುಶ್ರೂಷಕಿಯನ್ನು ನಿಯೋಜನೆ ಮಾಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.

11,908 ವಿದ್ಯಾರ್ಥಿಗಳು

ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಬಸವರಾಜ ಇಟ್ಟಿಗುಡಿ ಮಾತನಾಡಿ, ಪರೀಕ್ಷಾ ರೂಪರೇಷೆಗಳ ಮಾಹಿತಿ ನೀಡಿದರು ಹಾಗೂ ಜಿಲ್ಲೆಯಲ್ಲಿ 11,908 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಜರುಗಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಾವೇರಿ ತಹಸೀಲ್ದಾರ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ಪಾಟೀಲ, ಎಂ.ಬಿ. ಅಂಬಿಗೇರ, ಶ್ರೀಧರ, ಶ್ಯಾಮಸುಂದರ ಅಡಿಗ, ಆರ.ವಿ. ಚಿನ್ನಿಕಟ್ಟಿ, ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು. ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ

ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈಯರ್‌ಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲ್ಕುಲೇಟರ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಇಲಾಖೆಯಿಂದ ಪರೀಕ್ಷೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಯಾವ ಕ್ರಮಸಂಖ್ಯೆಯಿಂದ ಯಾವ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಸೂಚಿಸಿದ್ದಾರೆ.