ಸುಸೂತ್ರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ

| Published : May 21 2025, 12:28 AM IST

ಸುಸೂತ್ರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಅಥವಾ ಅನುತ್ತೀರ್ಣರಾದ ಒಟ್ಟು 6082 ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು 627 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6669 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ -2 ಮೇ 26ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ -2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಅಥವಾ ಅನುತ್ತೀರ್ಣರಾದ ಒಟ್ಟು 6082 ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು 627 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6669 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿದ್ದಾರೆ ಎಂದರು.

ಜಿಲ್ಲೆಯ 20 ಪ್ರೌಢಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಿದ್ದು, 20 ಪರೀಕ್ಷಾ ಕೇಂದ್ರಗಳಿಗೂ ಓರ್ವ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಪರೀಕ್ಷೆಯ ಮುಖ್ಯ ಅಧೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಓರ್ವ ಪೇಪರ್ ಕಸ್ಟೋಡಿಯನ್‌ಗಳನ್ನು ನೇಮಕ ಮಾಡಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಂತದ WEB CASTING ಮಾಡಿ ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಹಂತದಲ್ಲಿ WEB CASTING ಮೂಲಕ ಸಿಸಿ ಟಿವಿ ವೀಕ್ಷಿಸಿ, ವರದಿ ಸಲ್ಲಿಸಲು ಕ್ಷೇತ್ರಶಿಕ್ಷಣಾಧಿಕಾರಿಗಳ ಮುಖಾಂತರ ಓರ್ವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ. ಬ್ಲಾಕ್ ಹಂತದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಿದ್ದು, ಪ್ರತಿ ಬ್ಲಾಕ್‌ಗಳಿಗೆ ಓರ್ವ ಬ್ಲಾಕ್ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಓರ್ವ ಮೊಬೈಲ್ ಸ್ವಾಧೀನಾಧಿಕಾರಿಯನ್ನು ಮತ್ತು ಓರ್ವ ಸ್ಥಾನಿಕ ಜಾಗೃತ ದಳ ಅಧಿಕಾರಿಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಹಂತದಲ್ಲಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ಸಮಯದಲ್ಲಿ ಮುಚ್ಚಿಸಲು ಆದೇಶ ಹೊರಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಮೂಲಭೂತ ಸೌಕರ್ಯಗಳ ಬಗ್ಗೆ ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಚೆಕ್ ಲಿಸ್ಟ್ ನೀಡಲಾಗಿದ್ದು, ಈ ಚೆಕ್ ಲಿಸ್ಟ್‌ನಲ್ಲಿ ಮಾಹಿತಿ ಪಡೆಯಲಾಗಿದೆ. ಪರೀಕ್ಷಾ ದಿನಗಳಂದು ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ಲೋಪವಾಗದಂತೆ ಚೆಸ್ಕಾಂ ಇಲಾಖೆ ಅವರು ಗಮನಹರಿಸುವಂತೆ ಸೂಚಿಸಿದರು.

ಫಲಿತಾಂಶ ಉತ್ತಮಗೊಳಿಸಲು ಯೋಜನೆ ರೂಪಿಸಿ:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅನುತ್ತಿರ್ಣರಾಗಲು, ವಿದ್ಯಾಭ್ಯಾಸದಲ್ಲಿ ಆಸಕ್ತಿ ಮೂಡದಿರಲು ಹಾಗೂ ಶಾಲೆ ಬಿಡಲು ಕಾರಣಗಳೇನು ಎಂದು ಪರಿಶೀಲಿಸಿ, ಮುಂದಿನ ವರ್ಷದಲ್ಲಿ ಉತ್ತಮ ಫಲಿತಾಂಶ ತರಲು ಯೋಜನೆ ತಯಾರಿಸುವಂತೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿರುವ ಶಾಲೆಯ ಪ್ರಾಂಶುಪಾಲರು ಶಾಲೆಯಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಮನಸ್ಥಿತಿ ಕುರಿತು ವರದಿ ತಯಾರಿಸಿ ಮುಂದಿನ ಸಭೆಯಲ್ಲಿ ಹಾಜರಾಗುವುದು ಕಡ್ಡಾಯ. ಕಳೆದ ಬಾರಿಗಿಂತ ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದೊರೆತಿರುವುದು ಶ್ಲಾಘನೀಯವಾದರೂ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಕೆಲಸ ನಿರ್ವಹಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ನಿರ್ವಹಿಸಿ ಎಂದರು.

ಶಾಲೆ ಪ್ರಾರಂಭವಾದ ನಂತರ ಜಿಲ್ಲೆಯ ಪ್ರತಿಯೊಂದು ಶಾಲೆಯಲ್ಲಿ ಪೋಷಕರ ಸಭೆ ನಡೆಸಿ ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣ ಹಾಗೂ ಇತರೆ ಚಟುವಟಿಕೆಗಳಿಂದ ದೂರವಿರಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಓದಿನ ಮಹತ್ವ ಕುರಿತು ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಶಿಕ್ಷಣಾಧಿಕಾರಿ ಚಂದ್ರಕಾಂತ,

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವತ್ಥ್‌, ಬಿಇಒಗಳಾದ ಮಹದೇವ, ಸೌಭಾಗ್ಯವತಿ ಇತರರಿದ್ದರು.