ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.21ರಿಂದ ಏ.4ರ ವರೆಗೆ ನಡೆಯಲಿದ್ದು, ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‌ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆಯೇ ಎಂದು ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಲೋಪಕಂಡು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಅಗತ್ಯವಿದ್ದಲ್ಲಿ ತಂಡ ರಚಿಸಿಕೊಂಡು ಸುಗಮ ಹಾಗೂ ಸುಲಲಿತವಾಗಿ ಪರೀಕ್ಷೆ ನಡೆಸಬೇಕು. ವೈದ್ಯಕೀಯ, ಪೊಲೀಸ್ ತಂಡ ನಿಯೋಜನೆ ಹೀಗೆ ಪ್ರತೀ ತಂಡಗಳು ಕಾರ್ಯನಿರ್ವಹಿಸಲಿವೆ. ಪರೀಕ್ಷಾ ಕೇಂದ್ರದಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. 163 ಸೆಕ್ಷನ್ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಒಳ್ಳೆಯ ರೀತಿ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ಅಳವಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿ ಇರಬೇಕು. ಪರೀಕ್ಷಾ ದಿನದಂದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಕರ್ತವ್ಯ ನಿರ್ವಹಿಸಬೇಕು. ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ವಿದ್ಯಾರ್ಥಿಗಳು ಶ್ರಮಪಟ್ಟು ಓದಿರುತ್ತಾರೆ. ಅವರಿಗೆ ಅನ್ಯಾಯ ಆಗದಂತೆ ಗಮನಹರಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಂದಣಿಯಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮಾಹಿತಿ ನೀಡುವಂತಾಗಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪರೀಕ್ಷೆ ಎಂದರೆ ಭಯದ ವಾತಾವರಣ ನಿರ್ಮಾಣ ಮಾಡಬಾರದು. ಪಠ್ಯ ಪುಸ್ತಕ ಓದಿದವರು ಯಾವುದೇ ರೀತಿಯ ಒತ್ತಡ ಇಲ್ಲದೆ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿಸಿದರು.ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ಕೊಡಗು ಜಿಲ್ಲೆ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಗುಣಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮವಾಗಿ ತರುವ ನಿಟ್ಟಿನಲ್ಲಿ ಒತ್ತಡ ನಿವಾರಣೆ ಹಾಗೂ ಹಲವು ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ಮೊಟ್ಟ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ 6,622 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಉಳಿದಂತೆ 375 ವಿದ್ಯಾರ್ಥಿಗಳು ರಿಪಿಟರ್ಸ್ ವಿದ್ಯಾರ್ಥಿಗಳು ಪರೀಕ್ಷೆಯ ಬರೆಯಲಿದ್ದಾರೆ. ಒಟ್ಟು 6997 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 1881, ಸೋಮವಾರಪೇಟೆ ತಾಲೂಕಿನಲ್ಲಿ 2,855, ವಿರಾಜಪೇಟೆ ತಾಲೂಕಿನಲ್ಲಿ 2261 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನ 8, ಸೋಮವಾರಪೇಟೆ ತಾಲೂಕಿನ 11, ವಿರಾಜಪೇಟೆ ತಾಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್‌ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.ಶಿಕ್ಷಣ ಅಧಿಕಾರಿ ಎಂ.ಮಹದೇವಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸ್ಥಾನಿಕ ಜಾಗೃತ ದಳದ ಶಿಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಮಾರ್ಗಾಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು ಇತರರು ಇದ್ದರು.