ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಗದಗ: ಜಿಲ್ಲೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು(ಟಿಇಟಿ) ಡಿ. 7ರಂದು ಪಾರದರ್ಶಕವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಟಿಇಟಿ ಪರೀಕ್ಷೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಗದಗ ಶಹರದ 27 ಪರೀಕ್ಷಾ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗಳು ನಡೆಯಲಿದ್ದು, ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಟಿಇಟಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಬೇಕೆಂದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಪರೀಕ್ಷೆಯಲ್ಲಿ ಸಮಯ ಪರಿಪಾಲನೆ ಅತ್ಯವಶ್ಯಕ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ತುರ್ತು ವೈದ್ಯಕೀಯ ಸೇವೆ ಅಗತ್ಯವಿದ್ದಲ್ಲಿ ಆರೋಗ್ಯ ಇಲಾಖೆಯವರು ಈ ಕುರಿತು ಕ್ರಮ ವಹಿಸಬೇಕು. ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಸಮರ್ಪಕವಾಗಿ ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ಟಿಇಟಿ ಪರೀಕ್ಷೆಗಳು ಡಿ. 7ರಂದು ಗದಗ ಶಹರ ವಲಯದಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಪರೀಕ್ಷಾ ಕೇಂದ್ರಗಳಿಗೆ 12 ಮಾರ್ಗಗಳನ್ನು ರಚಿಸಲಾಗಿದೆ. ಪ್ರಥಮ ಅಧಿವೇಶನ ಪರೀಕ್ಷೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 12ರ ವರೆಗೆ, ದ್ವಿತೀಯ ಅಧಿವೇಶನ ಪರೀಕ್ಷೆ ಮಧ್ಯಾಹ್ನ 2ರಿಂದ ಮಧ್ಯಾಹ್ನ 4.30ರ ವರೆಗೆ ಜರುಗಲಿವೆ. ಪ್ರಥಮ ಅಧಿವೇಶನ ಪರೀಕ್ಷೆ 2159 ಅಭ್ಯರ್ಥಿಗಳು ಹಾಗೂ ದ್ವಿತೀಯ ಅಧಿವೇಶನ ಪರೀಕ್ಷೆಯನ್ನು 6391 ಅಭ್ಯರ್ಥಿಗಳು ಒಟ್ಟಾರೆ ಟಿಇಟಿ ಪರೀಕ್ಷೆಯನ್ನು 8550 ಅಭ್ಯರ್ಥಿಗಳು ಬರೆಯಲಿದ್ದಾರೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಶಾಂತಿಯುತವಾಗಿ ಜರುಗಿಸಲು ಕ್ರಮ ವಹಿಸಲಾಗಿದೆ ಎಂದರು.ಸಭೆಯಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆ, ವಾಕರಸಾ ಸಂಸ್ಥೆಯಿಂದ ಸಂಚಾರದ ಸೌಲಭ್ಯ ಕುರಿತು ಚರ್ಚಿಸಲಾಯಿತು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪ್ರವಾಸೋದ್ಯಮ, ಖಜಾನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.