ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ

| Published : Feb 06 2024, 01:31 AM IST

ಸಾರಾಂಶ

ಬಡವರ ಮಕ್ಕಳಿಗೆ ಧ್ವಜ ನೀಡುವವರ ಮಕ್ಕಳು ವಿದೇಶಗಳಲ್ಲಿ ಉನ್ನತ‌ ವ್ಯಾಸಾಂಗ ಮಾಡುತ್ತಾರೆ. ಆದ್ದರಿಂದ ಇಂತಹ ಹುನ್ನಾರಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಐದು ಗ್ಯಾರಂಟಿಗಳ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮೀ ಸೇರಿದಂತೆ ಪಂಚ ಗ್ಯಾರಂಟಿ ಮೂಲಕ ನೀಡಲಾಗಿರುವ ಆರ್ಥಿಕ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಷ್ಟಗಳ ನಡುವೆಯೂ ಪ್ರತಿವರ್ಷ ₹60 ಸಾವಿರ ಕೋಟಿ ಬಡವರ ಕಲ್ಯಾಣಕ್ಕೆ ಸರ್ಕಾರ ಖರ್ಚು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಹೊಸ ಆಸ್ಪತ್ರೆ, ಶಾಲೆಗಳು ಮತ್ತು ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಿದೆ. ಜಿಲ್ಲೆಯಲ್ಲಿ ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ರಾಜ್ಯ ದಿವಾಳಿ ಆಗಲಿದೆ ಎಂದು ಟೀಕಿಸಿದವರೇ ಇಂದು ಪಂಚ ಗ್ಯಾರಂಟಿ ಯೋಜನೆಯ ಫಲವನ್ನು ಅನುಭವಿಸುತ್ತಿರುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿವರ್ಷಕ್ಕೆ ಕುಟುಂಬದ ಯಜಮಾನಿಯರಿಗೆ ₹ 24 ಸಾವಿರ ನೀಡುವ ಮೂಲಕ ಬಡವರಿಗೆ ನೇರವಾಗಿ ಸಹಾಯಹಸ್ತ ನೀಡಿದೆ. ಬೆಳಗಾವಿ ಜಿಲ್ಲೆಯೊಂದರಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ₹ 212 ಕೋಟಿ ನೀಡುತ್ತಿರುವುದು ಕಡಿಮೆಯಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ಶಾಸಕ ಆಸಿಫ್ (ರಾಜು) ಸೇಠ್ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಮನೆ‌ಮನೆಗೆ ತೆರಳಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹಿ ಹೊಂದಿರುವ ಗ್ಯಾರಂಟಿ ಕಾರ್ಡುಗಳನ್ನು ನೀಡಲಾಗಿತ್ತು. ನಾವು ನೀಡಿದ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಪಂಚ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ನೀಡಲಾದ ಭರವಸೆಗಳನ್ನು ಚಾಚೂತಪ್ಪದೇ ಅನುಷ್ಠಾನಗೊಳಿಸಲಾಗಿದೆ. ಐದೂ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಅತ್ಯಂತ ಕಡಿಮೆ ಕಾಲಾವಧಿಯಲ್ಲಿ ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆ ವಿರೋಧಿಸಿದವರು ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ತಾವೂ ಗ್ಯಾರಂಟಿ ಘೋಷಿಸುತ್ತಿರುವುದು ಕರ್ನಾಟಕ ಸರಕಾರಕ್ಕೆ ಸಂದ ಗೆಲುವು ಆಗಿದೆ ಎಂದರು.

ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ -2 ಪ್ರಕಾಶ ಹುಕ್ಕೇರಿ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸರ್ಕಾರ ಸಂಪೂರ್ಣ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯ ಡಿಬಿಟಿ ಪೋಸ್ಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನಿಭವಿಗಳಿಗೆ ಚೆಕ್ ವಿತರಿಸಲಾಯಿತು.

ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಪ್ರೊಬೆಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ನಗಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ನಗರ ಸೇವಕರು, ಜನ ಪ್ರತಿನಿಧಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

---

ಕೋಟ್‌

ಬಡವರ ಮಕ್ಕಳಿಗೆ ಧ್ವಜ ನೀಡುವವರ ಮಕ್ಕಳು ವಿದೇಶಗಳಲ್ಲಿ ಉನ್ನತ‌ ವ್ಯಾಸಾಂಗ ಮಾಡುತ್ತಾರೆ. ಆದ್ದರಿಂದ ಇಂತಹ ಹುನ್ನಾರಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಗ್ಯಾರಂಟಿ ಯೋಜನೆ ಮೂಲಕ ಉಳಿತಾಯವಾಗುವ ಹಣವನ್ನು ಫಲಾನುಭವಿಗಳು ತಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳಬೇಕು. ತಮ್ಮ ಬಗ್ಗೆ ಸರ್ಕಾರ ಹೊಂದಿರುವ ಕಾಳಜಿಯನ್ನು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮನೆ ಮನೆಗೆ ತಲುಪಿಸಬೇಕು.

- ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ